ಬೆಂಗಳೂರು : ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ಅಕ್ಟೋಬರ್ 28 ರಂದು ನಡೆದ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಯಿಂದ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ 40 ಅಭ್ಯರ್ಥಿಗಳ ಭವಿಷ್ಯ ಇಂದು ಬಹಿರಂಗವಾಗಲಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ, ಪಶ್ಚಿಮ ಪದವೀಧರ ಹಾಗೂ ಈಶಾನ್ಯ ಶಿಕ್ಷಕರ ಮತ ಕ್ಷೇತ್ರಗಳಿಗೆ ನ.2 ರಂದು ಮತ ಎಣಿಕೆ ನಡೆಯಬೇಕಿತ್ತು. ಆದರೆ, ಚುನಾವಣಾ ಆಯೋಗ ಕಾರಣಾಂತರಗಳಿಂದಾಗಿ ಶಿರಾ ಮತ್ತು ಆರ್.ಆರ್. ನಗರ ವಿಧಾನಸಭೆಯ ಉಪಚುನಾವಣೆಯ ಮತ ಎಣಿಕೆಯ ದಿನದಂದು ನಡೆಸಲು ತೀರ್ಮಾನಿಸಿದ್ದರಿಂದ ವಿಧಾನಪರಿಷತ್‌ನ ನಾಲ್ಕು ಸ್ಥಾನಗಳ ಮತ ಎಣಿಕೆಯು ಉಪಚುನಾವಣೆಯ ದಿನದಂದೇ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ರಾತ್ರಿ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.
ಪದವೀಧರ ಕ್ಷೇತ್ರದ ಮತ ಎಣಿಕೆಯು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯು ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ನಡೆಯಲಿದೆ. ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಮತ ಕ್ಷೇತ್ರದ ಮತ ಎಣಿಕೆಯು ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ.