ಬೆಂಗಳೂರು: ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ನಿಯೋಗ ಇಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಗೆ ದೂರು ನೀಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ಎಂಎಲ್ಸಿ ಎಂ.ಸಿ. ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಪೊಲೀಸ್ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ, ದೂರು ನೀಡಿದರು.
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ನಿಯೋಗ ದೂರು ಕೊರೊನಾ ಸೋಂಕು ಹರಡುವಿಕೆ ಸಂಬಂಧ ವದಂತಿಗಳನ್ನು ಹಬ್ಬಿಸುವುದರ ಜತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಕೋಮು ಸಾಮರಸ್ಯ ಹಾಳುಗೆಡವಲು ಯತ್ನಿಸುತ್ತಿರುವ ಕೇಂದ್ರ ಸಚಿವರಾದ ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಐಪಿಸಿ ಕಲಂ 153 A ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರವಾಗಿ ಮನವಿ ಸಲ್ಲಿಸಿದರು.