ಬೆಂಗಳೂರು:ರಾಷ್ಟ್ರೀಯ ನಾಯಕರ ಭೇಟಿ ಹಾಗೂ ಚರ್ಚೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿದ್ದ ಪಕ್ಷದ ಕಾರ್ಯಕ್ರಮಗಳನ್ನು ಮುಗಿಸಿ ಮಧ್ಯಾಹ್ನದ ನಂತರ ತೆರಳಿದ ಡಿಕೆಶಿ, ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ವಿವಿಧ ಮುಖಂಡರ ಜೊತೆ ನಾಳೆ ಅವರು ಚರ್ಚಿಸಲಿದ್ದಾರೆ.
ಅವಕಾಶ ಸಿಕ್ಕಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸುವ ಸಾಧ್ಯತೆಯಿದೆ. ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿ ಹಾಗೂ ಸರ್ಕಾರದ ಅಸಹಕಾರದ ವಿಚಾರವಾಗಿ ಪಕ್ಷದ ಹೈಕಮಾಂಡ್ ನಾಯಕರಿಗೆ ಮಾಹಿತಿ ಒದಗಿಸಲಿದ್ದಾರೆ.
ಅಲ್ಲದೇ, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸುವ ಹೋರಾಟಗಳ ಕುರಿತು ಮಾಹಿತಿ ಕೊಡಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕೈಗೊಂಡಿರುವ ಕಾರ್ಯಕ್ರಮಗಳ ಪಟ್ಟಿ ನೀಡಲಿದ್ದಾರೆ.