ಕರ್ನಾಟಕ

karnataka

ETV Bharat / city

ಹಂಪನಾ ಅವರನ್ನು ಠಾಣೆಗೆ ಕರೆಯಿಸಿ ವಿಚಾರಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ : ಡಿ.ಕೆ.ಶಿವಕುಮಾರ್ - ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂ.ಪ.ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಕೆಶಿ
ಡಿಕೆಶಿ

By

Published : Jan 22, 2021, 12:52 PM IST

ಬೆಂಗಳೂರು: ಜನರ ಪರವಾಗಿ ಧ್ವನಿ ಎತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ ನಾಗರಾಜಯ್ಯ ವಿರುದ್ಧ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ರಾಜ್ಯ ಬಿಜೆಪಿ ಸರ್ಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಹಾಗೂ ಎಲ್ಲಕ್ಕೂ ಮಿಗಿಲಾಗಿ ಚಿಂತಕ. ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಬಗ್ಗೆ ಹಗೆತನ ಸಾಧಿಸುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದೀಗ ಸಾಹಿತಿಗಳನ್ನೂ ಆ ಪಟ್ಟಿಗೆ ಸೇರಿಸಿಕೊಂಡಿರುವುದು ದುರಂತದ ಸಂಗತಿ ಎಂದಿದ್ದಾರೆ.

ಇನ್ನು ಯಾವುದೇ ಸರ್ಕಾರವಿರಲಿ, ಅದರ ಜನವಿರೋಧಿ ನಡೆಯನ್ನು ಟೀಕಿಸುವ, ತಿದ್ದುವ ಹಕ್ಕನ್ನು ಈ ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನ ಕಲ್ಪಿಸಿದೆ. ಆದರೆ ಸರ್ಕಾರಗಳು ತಮಗಿರುವ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು, ಪೊಲೀಸ್ ಬಲದ ಮೂಲಕ ಸಾಹಿತಿಗಳು, ಬುದ್ಧಿ ಜೀವಿಗಳು, ಪ್ರಜ್ಞಾವಂತರ ಧ್ವನಿ ಅಡಗಿಸಲು ಹೊರಟಿರುವುದು ಖಂಡನೀಯ. ಸರ್ಕಾರ ತನ್ನ ಈ ವಕ್ರ ನಡೆಯನ್ನು ತಿದ್ದಿಕೊಳ್ಳದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ABOUT THE AUTHOR

...view details