ಬೆಂಗಳೂರು:ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಮತ್ತು ಅನುಮತಿ ಪಡೆಯಲು ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡುವ ಬಗ್ಗೆ ಇಂದು ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇದೆ. ಕರ್ನಾಟಕದ ಬಿಜೆಪಿ ಮಹಾನಾಯಕ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ.
ಇಂದು ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಉನ್ನತ ನಾಯಕರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಮಾಲೋಚಿಸುವ ಸಾಧ್ಯತೆಗಳಿವೆ. ನಿನ್ನೆಯೇ ದೆಹಲಿ ತಲುಪಿರುವ ಸಿಎಂ ಬೊಮ್ಮಾಯಿ, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮೇಕೆದಾಟು ಮತ್ತು ಕಳಸಾ ಬಂಡೂರಿ ಯೋಜನೆಗೆಳಿಗೆ ಹಸಿರು ನಿಶಾನೆ ತೋರುವಂತೆ ಮನವಿ ಮಾಡಿದ್ದಾರೆ. ಇಂದು ಕೂಡಾ ಅವರು ಹಲವು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
ವರಿಷ್ಠರ ಭೇಟಿಗೆ ಇನ್ನೂ ಅಪಾಯಿಂಟ್‌ಮೆಂಟ್ ಸಿಕ್ಕಿಲ್ಲ:ದೆಹಲಿಯಲ್ಲಿ ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾನು ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ದೆಹಲಿಗೆ ಇಲ್ಲಿಗೆ ಬಂದಿದ್ದೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಅವರೊಂದಿಗಿನ ಸಭೆಯಲ್ಲಿ ಪಕ್ಷ ಸಂಘಟನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.
ಆದರೆ, ಪಕ್ಷದ ವರಿಷ್ಠರ ಜತೆಗಿನ ಸಭೆಗೆ ಇನ್ನೂ ಅಪಾಯಿಂಟ್‌ಮೆಂಟ್ ಸಿಕ್ಕಿಲ್ಲ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆಗೆ ಮುಂದಾಗಬೇಕೇ ಎಂಬ ತೀರ್ಮಾನ ವರಿಷ್ಠರ ಸಭೆಯ ಬಳಿಕವೇ ಗೊತ್ತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.