ಬೆಂಗಳೂರು:ಮಹದಾಯಿ ಹಾಗೂ ಮೇಕೆದಾಟು ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ನ್ಯಾಯ ಒದಗಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ರು.
ಕುಮಾರಕೃಪಾ ಅತಿಥಿ ಗೃಹದಲ್ಲಿ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ, ಮಹದಾಯಿ ವಿವಾದದ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದ್ರು. ಈ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇದ್ದರು.
ಬಹುದಿನಗಳಿಂದ ಬಗೆಹರಿಯದ ಮಹದಾಯಿ ಯೋಜನೆ ಜಾರಿಗಾಗಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಪರಿಸರ ಇಲಾಖೆಯೂ ಯೋಜನೆ ಜಾರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ಗೋವಾ ಸರ್ಕಾರ ಗೆಜೆಟ್ ನೋಟಿಪಿಕೇಷನ್ ಹೊರಡಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ವಿವಾದ ಬಗೆಹರಿಸಿ ರಾಜ್ಯದ ರೈತರಿಗೆ ನ್ಯಾಯ ಒದಗಿಸಿ ಎಂದು ಸಿಎಂ ಬಿಎಸ್ವೈ ಮನವರಿಕೆ ಮಾಡಿದರು.
ಅಷ್ಟೇ ಅಲ್ಲದೆ, ಕೃಷ್ಣಾ ಮತ್ತು ಕಾವೇರಿ ನದಿ ನೀರು ಹಂಚಿಕೆಯಲ್ಲೂ ರಾಜ್ಯಕ್ಕೆ ಅನ್ಯಾಯವಾಗುತ್ತಿರುವ ಕುರಿತು ಸಚಿವರ ಗಮನಕ್ಕೆ ತಂದರು. ಕೃಷ್ಣಾ ಮತ್ತು ಕಾವೇರಿ ನದಿಗಳು ರಾಜ್ಯದಲ್ಲಿ ಹೆಚ್ಚು ಹರಿಯುತ್ತಿದ್ದರೂ ನೀರು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಈ ಎರಡು ನದಿ ನೀರು ಹಂಚಿಕೆ ಬಗ್ಗೆ ಮಾರ್ಪಡಿಸಿ ಹೆಚ್ಚು ಪಾಲು ರಾಜ್ಯಕ್ಕೆ ದೊರೆಯುವಂತೆ ಮಾಡಬೇಕು. ಹಾಗೆಯೇ ಜಲಸಂಪನ್ಮೂಲ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಬಾಕಿಯಿರುವ ಬಿಲ್ಗಳನ್ನು ತ್ವರಿತವಾಗಿ ಬಿಡುಗಡೆಗೊಳಿಸಲು ಕೇಂದ್ರ ಸಚಿವರಿಗೆ ಮನವಿ ಮಾಡಿದ್ರು.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ ಸಿಎಂ
ಬಿಎಸ್ವೈ ನೀಡಿರುವ ಮನವಿ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್, ಮುಂದಿನ ವಾರ ಜಲಸಂಪನ್ಮೂಲ ಸಚಿವರು ಮತ್ತು ಅದಕ್ಕೆ ಸಂಬಂಧಿಸಿದ ಇಲಾಖೆ ಕಾರ್ಯದರ್ಶಿಗಳು ದೆಹಲಿಗೆ ಬರುವಂತೆ ಆಹ್ವಾನಿಸಿದರು. ಈ ಕುರಿತು ಸಭೆ ನಡೆಸಿ ಸಮಾಲೋಚನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ರು.