ಬೆಂಗಳೂರು: ರಾಜ್ಯದಲ್ಲಿ ಅಪೌಷ್ಟಿಕತೆಗೆ ಒಳಗಾಗಿರುವ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ, ಆರೋಗ್ಯ ತಪಾಸಣೆ ಮಾಡುವ ಹಾಗೂ ಪೌಷ್ಟಿಕಾಂಶಗಳನ್ನು ಒದಗಿಸುವ ಕಾರ್ಯಕ್ರಮಗಳ ಮೇಲ್ವಿಚಾರಣಾ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಹೈಕೋರ್ಟ್ ಸೂಚಿಸಿದೆ.
ಈ ಸಂಬಂಧ ಹೈಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಹೆಸರು ಶಿಫಾರಸ್ಸು ಮಾಡುವಂತೆ ಕೋರ್ಟ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ. ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆ ಅಥಣಿಯ ವಿಮೋಚನಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.