ಬೆಂಗಳೂರು/ಧಾರವಾಡ: ಹೈಕೋರ್ಟ್ ಸೂಚನೆಯಂತೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್‌ಗಳ ಮರುವಿಂಗಡಣೆಯ ಕುರಿತು ಮಾರ್ಗಸೂಚಿ ಕಳುಹಿಸಿಕೊಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಭಿವೃದ್ದಿ ಕಾಮಗಾರಿಗಳು ಮತ್ತು ಕ್ರೆಡಾಯ್ ಸಂಸ್ಥೆಗಳ ಸಮಸ್ಯೆಗಳು, ಕೈಗಾರಿಕಾ ಪ್ರದೇಶಗಳಲ್ಲಿ ತೆರಿಗೆ ವಿಧಿಸುವ ಕುರಿತಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ನಗರಾಭಿವೃದ್ದಿ ಸಚಿವ ಬಿ.ಎ. ಬಸವರಾಜ್ ಸಭೆ ನಡೆಸಿದರು.
ಸಭೆಯಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ಇತ್ತೀಚೆಗೆ ಹೈಕೋರ್ಟ್ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡ್ ಮರುವಿಂಗಡಣೆ ಮಾಡುವಂತೆ ಸೂಚನೆಗಳನ್ನು ನೀಡಿದೆ. ಈ ಕಾರ್ಯದ ಪ್ರಾರಂಭಕ್ಕೆ ಸರಕಾರದಿಂದ ಮಾರ್ಗಸೂಚಿಗಳ ಅಗತ್ಯವಿದ್ದು, ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಚಿವ ಜಗದೀಶ್ ಶೆಟ್ಟರ್ ಗಮನ ಸೆಳೆದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನಗರಾಭಿವೃದ್ದಿ ಸಚಿವ ಬಸವರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.