ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸಿ ಗಣಿಗಾರಿಕೆಗೆ ಅನುಮತಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಿ ವಿಸ್ತೃತ ವರದಿ ಸಲ್ಲಿಸಲು ಸಾರಿಗೆ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ನೇಮಿಸಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ಗುರುವಾರ ಮಾಹಿತಿ ನೀಡಿದೆ.
ವಾಣಿ ವಿಲಾಸ್ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಪವನ್ ರಾಮಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ, ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸರ್ಕಾರಿ ವಕೀಲರು ಹಾಜರಾಗಿ, ರಾಜ್ಯದ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಪರವಾನಗಿ ನೀಡಿರುವ ಎಲ್ಲ ಪ್ರಕರಣಗಳ ಕುರಿತು ಸಮಗ್ರವಾಗಿ ತನಿಖೆ ನಡೆಸಬೇಕು. ಅದಕ್ಕಾಗಿ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಬೇಕು ಎಂದು 2022ರ ಫೆ.01ರಂದು ಹೈಕೋರ್ಟ್ ಆದೇಶಿಸಿತ್ತು. ಅದರಂತೆ ತನಿಖೆ ನಡೆಸಲು ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.