ಬೆಂಗಳೂರು :ರಾಜ್ಯ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (International Skill Development Corporation) ಜಂಟಿಯಾಗಿ ಇಂದು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು 'ಉನ್ನತ ಶಿಕ್ಷಣ: ಭವಿಷ್ಯದ ಕಾರ್ಯತಂತ್ರ' ಎಂಬ ವಿಚಾರದಡಿ ಸಮಾವೇಶ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಈ ವೇಳೆ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(National Education Policy) ಫಲವಾಗಿ ಇನ್ನು 20 ವರ್ಷಗಳಲ್ಲಿ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲಿದೆ. ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ ಎಂದು ಪ್ರತಿಪಾದಿಸಿದರು.
34 ವರ್ಷಗಳ ನಂತರ ಎನ್ಇಪಿ ಜಾರಿ :ಶಿಕ್ಷಣವನ್ನು ಬದಲಿಸುವ ಮೂಲಕ ದೇಶವನ್ನು ಬದಲಿಸಬಹುದು ಎನ್ನುವುದು ಪ್ರಧಾನಿ ಮೋದಿಯವರಿಗೆ ಗೊತ್ತಾಗಿದೆ. ಆದ್ದರಿಂದಲೇ ದೇಶದಲ್ಲಿ 34 ವರ್ಷಗಳ ನಂತರ ಎನ್ಇಪಿ ಜಾರಿಗೆ ತರಲಾಗುತ್ತಿದೆ.
ದುರ್ಬಲ ವರ್ಗಗಳ ಮಕ್ಕಳಿಗೆ ಈಗ ಶಿಕ್ಷಣವನ್ನು ಪ್ರಧಾನ ಹಕ್ಕನ್ನಾಗಿ ಮಾಡಲಾಗಿದೆ. ಎನ್ಇಪಿ ನೂರಕ್ಕೆ ನೂರರಷ್ಟು ಸಕಾರಾತ್ಮಕವಾಗಿದೆ. ಹಿಂದಿನ ಶಿಕ್ಷಣ ಪದ್ಧತಿಯಲ್ಲಿ ಶೇ.20ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗಕ್ಕೆ ಅರ್ಹರಾಗುತ್ತಿದ್ದರು.
ಆದರೆ, ಈಗ ಕೌಶಲ್ಯ ಮತ್ತು ಡಿಜಿಟಲ್ ಕಲಿಕೆಗೆ (Skills and digital learning) ಒತ್ತು ನೀಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉದ್ಯೋಗಕ್ಕೆ ಬೇಕಾದ ಅರ್ಹತೆ ಮತ್ತು ಸಾಮರ್ಥ್ಯಗಳನ್ನು ತನ್ನದಾಗಿಸಿಕೊಳ್ಳಲಿದ್ದಾನೆ ಎಂದರು.