ಬೆಂಗಳೂರು:ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕಂಠೀರವ ಕ್ರೀಡಾಂಗಣವನ್ನು ಉನ್ನತೀಕರಿಸಲು ಉದ್ದೇಶಿಸಲಾಗಿದೆ. ಈಗಾಗಲೇ ನೀಲನಕ್ಷೆ (ಡಿಪಿಆರ್) ಸಿದ್ಧವಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣದ ಉನ್ನತೀಕರಣಕ್ಕೆ ಉದ್ದೇಶಿಸಲಾಗಿದೆ. ಸದ್ಯ ಮಾತುಕತೆ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಅಂತಿಮ ರೂಪ ನೀಡಲಾಗುವುದು ಎಂದು ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣವನ್ನು ಪಿಪಿಪಿ ಮಾದರಿಯಲ್ಲಿ ಹೈಟೆಕ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ಸಹಭಾಗಿತ್ವಕ್ಕಾಗಿ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದ್ದು, 2 ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ. ಒಳಾಂಗಣ ಸೇರಿದಂತೆ ಇಡೀ ಕ್ರೀಡಾಂಗಣವನ್ನು ಹೈಟೆಕ್ ಮಾಡಲು ನೀಲನಕ್ಷೆ ಸಿದ್ಧಪಡಿಸಲಾಗಿದೆ. ಜೊತೆಗೆ ಬಹುಮಹಡಿ ಕಟ್ಟಡ, ತ್ರಿತಾರಾ ಹೋಟೆಲ್ ಮತ್ತು ಪಂಚತಾರಾ ಹೋಟೆಲ್‍ಗಳು, ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು ಒಳಗೊಂಡಿರಲಿವೆ. ಜೊತೆಗೆ ಜಿಲ್ಲೆಗಳ ಕ್ರೀಡಾಂಗಣವನ್ನೂ ಉನ್ನತೀಕರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಮುಂದೆ ಬಂದಲ್ಲಿ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೆ ಕ್ರೀಡಾಂಗಣದ ಅಭಿವೃದ್ಧಿಗೆ ಸಿಎಸ್‍ಆರ್ ಫಂಡ್ ಬಳಕೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ರಾಜ್ಯದಿಂದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗಬೇಕು ಎನ್ನುವುದೇ ಇದರ ಮೂಲ ಉದ್ದೇಶ. ಒಲಿಂಪಿಕ್‍ನ 14 ವಿಧದ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು 100ಕ್ಕೂ ಹೆಚ್ಚು ಕ್ರೀಡಾಪಟುಗಳು ಸಿದ್ಧವಾಗಬೇಕು. ಕನಿಷ್ಠ 50 ಕ್ರೀಡಾಪಟುಗಳಾದರೂ ಅರ್ಹತೆ ಪಡೆಯಬೇಕು. ಆ ನಿಟ್ಟಿನಲ್ಲಿ ಅಗತ್ಯವಿರುವ ಕ್ರೀಡಾ ಸೌಲಭ್ಯ, ತರಬೇತಿ ನೀಡಲು ಕ್ರಮ ತೆಗೆದುಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೈಚಳಿ ಬಿಟ್ಟು ಕೆಲಸ ಮಾಡಿ:
ಕ್ರೀಡೆಗೆ ಅಗತ್ಯವಾದ ಎಲ್ಲಾ ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ. ಕೇವಲ ಅನುದಾನ ನೀಡಿದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗುವುದಿಲ್ಲ. ಸರ್ಕಾರ ನೀಡಿದ ಸೌಲಭ್ಯವನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು. ಇದಕ್ಕೆ ಅಧಿಕಾರಿಗಳು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಮೀಸಲಿಟ್ಟ ಅನುದಾದನ ಬಳಕೆಯಾಗದೆ ಉಳಿದರೆ ಅಥವಾ ಸರಿಯಾದ ರೀತಿಯಲ್ಲಿ ಕಾರ್ಯ ಅನುಷ್ಠಾನವಾಗದಿದ್ದರೆ, ಕ್ರೀಡಾಪಟುಗಳ ಬದುಕನ್ನೇ ನಾಶ ಮಾಡಿದಂತಾಗುತ್ತದೆ. ಅಧಿಕಾರಿಗಳು ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಅಹರ್ನಿಶಿ ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.