ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗುತ್ತಿದೆ. ಜನರು ಲಸಿಕಾ ಕೇಂದ್ರಕ್ಕೆ ಬಂದು ವಾಪಸ್ ಹೋಗುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸೋಮವಾರ ಅಥವಾ ಮಂಗಳವಾರ ದೆಹಲಿಗೆ ಹೋಗುತ್ತಿದ್ದೇನೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಹೆಚ್ಚಿನ ಲಸಿಕೆಗೆ ಬೇಡಿಕೆ ಇಡಲಾಗುವುದು ಎಂದರು.
ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ :ಇಂದು ರಾಜ್ಯದ ಮೂರು ಜಿಲ್ಲೆಗಳಿಗೆ ಆರೋಗ್ಯ ಸಚಿವ ಸುಧಾಕರ್ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಕೋವಿಡ್ ಪಾಸಿಟಿವಿಟಿ ದರ ಜಾಸ್ತಿ ಇದ್ದು, ಸಾವಿನ ಸಂಖ್ಯೆಯೂ ಹೆಚ್ಚಿದೆ. ಈ ಸಂಬಂಧ ಮೈಸೂರಿನಲ್ಲಿ ಸಚಿವರು ಸಭೆ ನಡೆಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟದ ಉದ್ಘಾಟನೆ ಮಾಡಲಿದ್ದಾರೆ.
'ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ನನಗೆ ಗೊತ್ತಿಲ್ಲ'
ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಗೊಂದಲದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ಅದು ಕಾಂಗ್ರೆಸ್ನವರ ಆಂತರಿಕ ವಿಷಯ. ಆ ಬಗ್ಗೆ ನನಗೇನೂ ಗೊತ್ತಿಲ್ಲ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರು ಅಥವಾ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಆಗ್ತಾರೆ. ಈ ಪದ್ದತಿಯೇ ಹಿಂದಿನಿಂದ ನಡೆದುಕೊಂಡು ಬಂದಿರುವುದು ಎಂದರು.