ಬೆಂಗಳೂರು: ಏ.20ರಿಂದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಒಳಾಡಳಿತ, ವೈದ್ಯಕೀಯ ಶಿಕ್ಷಣ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆಹಾರ ಮತ್ತು ನಾಗರಿಕ ಪೂರೈಕೆ, ಸಾರಿಗೆ, ಪಶುವೈದ್ಯಕೀಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಿಬ್ಬಂದಿ ಆಡಳಿತ ಸುಧಾರಣೆ, ಆರ್ಥಿಕ ಇಲಾಖೆ, ಅರಣ್ಯ ಮತ್ತು ಪರಿಸರ ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾರ್ಮಿಕ ಇಲಾಖೆ, ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಎಲ್ಲ ವರ್ಗದ ಸಿಬ್ಬಂದಿಗೂ ಕರ್ತವ್ಯಕ್ಕೆ ಹಾಜರಾಗಲು ನಿರ್ದೇಶನ ನೀಡಲಾಗಿದೆ.
ಅಗತ್ಯ ಸೇವೆ ಒದಗಿಸುವ ಈ ಮೇಲಿನ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುವ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಎಲ್ಲ ಅಧಿಕಾರಿಗಳು ಮತ್ತು ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದಗಳ ಶೇ.33ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಸುತ್ತೋಲೆ ಏ.20 ರಿಂದ ಮೇ 3ರ ವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.