ಬೆಂಗಳೂರು :ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಉದ್ಯಮಿ ಆಲಂ ಪಾಷಾಗೆ ಒಂದು ಲಕ್ಷ ರೂ. ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
ಆಲಂ ಪಾಷಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಚ್.ಪಿ.ಸಂದೇಶ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಶೀಲವಂತ್ ವಾದಿಸಿ, ಪ್ರಕರಣ ಕುರಿತು ಪೊಲೀಸರು ನಡೆಸಿರುವ ತನಿಖೆಯಲ್ಲಿ ಲೋಪವಾಗಿದೆ ಎಂದು ಭಾವಿಸಿ ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ. ಆದರೆ, ತನಿಖೆಯಲ್ಲಿ ಯಾವುದೇ ಲೋಪವಾಗಿಲ್ಲ. ಈ ಕುರಿತು ಪ್ರಕರಣದ ದೂರುದಾರರಾಗಲಿ ಅಥವಾ ಆರೋಪಿಗಳಾಗಲಿ ಆಕ್ಷೇಪಿಸಿಲ್ಲ ಎಂದು ವಿವರಿಸಿದರು.