ಬೆಂಗಳೂರು: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಒತ್ತಾಯಿಸಿ ಕೂಡಲ ಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದ್ದು, ಪತ್ರ ಚಳುವಳಿ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.
ನಗರದ ಫ್ರೀಡಂ ಪಾರ್ಕ್ನಲ್ಲಿ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಕೈಬಿಡಲು ನಿರಾಕರಿಸಿರುವ ಶ್ರೀಗಳು, ಸರ್ಕಾರಕ್ಕೆ ಮಾರ್ಚ್ 4ರ ಗಡುವು ವಿಧಿಸಿ ಧರಣಿ ಮುಂದುವರೆಸಿದ್ದಾರೆ. ಸಮುದಾಯದ ಪ್ರಮುಖರೊಂದಿಗೆ ಸತ್ಯಾಗ್ರಹದಲ್ಲಿ ನಿರತರಾಗಿದ್ದು, ಪತ್ರ ಚಳುವಳಿಗೆ ನಿರ್ಧರಿಸಿದ್ದಾರೆ.
ಈ ಕುರಿತು ಮಾತನಾಡಿದ ಶ್ರೀಗಳು, ನಮ್ಮ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಆರಂಭವಾಗಿ ಇಂದಿಗೆ 39 ದಿನವಾಗಿದೆ. ಆದರೆ ಸರ್ಕಾರದಿಂದ ಇನ್ನೂ ಸ್ಪಷ್ಟ ಭರವಸೆ ಸಿಕ್ಕಿಲ್ಲ. ಇಂದಿನಿಂದ ನಮ್ಮ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದೇವೆ. ಮಾರ್ಚ್ 3 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಬಗ್ಗೆ ಸ್ಪಷ್ಟ ತೀರ್ಮಾನ ಮಾಡಲಿ. ಸಚಿವರು ಸರ್ಕಾರದ ಮೇಲೆ ಒತ್ತಡ ಹಾಕಬೇಡಿ, ನಾವು ಮಾಡಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಇನ್ನು ಕೂಡ ಏನೂ ಆಗಿಲ್ಲ. ಹೀಗಾಗಿ ಇಂದು ರಾಜ್ಯಾದ್ಯಂತ ಪತ್ರ ಚಳುವಳಿ ಆರಂಭಿಸಲು ನಿರ್ಧರಿಸಿದ್ದೇವೆ ಎಂದರು.