ಬೆಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ಕೆಲ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿವರ್ತಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಅರ್ಜಿದಾರರ ಮನವಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಗೆ ಹೈಕೋರ್ಟ್ ನಿರ್ದೇಶಿಸಿದೆ. ದ್ವೇಷಪೂರಿತ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೋರಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಿವಾಸಿ ಮೊಹಮ್ಮದ್ ಖಲೀವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕ ಸದಸ್ಯಪೀಠ ಈ ನಿರ್ದೇಶನ ನೀಡಿದೆ.
ಅರ್ಜಿಯನ್ನು ಪಿಐಎಲ್ ಆಗಿ ಪರಿಗಣಿಸಿ ವಿಚಾರಣೆ ನಡೆಸುವಂತೆ ಅರ್ಜಿದಾರರ ಪರ ವಕೀಲರು ಮಾಡಿದ ಮನವಿ ಪರಿಗಣಿಸಿದ ಪೀಠ, ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿವರ್ತಿಸುವ ಮನವಿ ಕುರಿತು ಅರ್ಜಿದಾರರು ಸೂಕ್ತ ಮೆಮೊ ಸಲ್ಲಿಸಬೇಕು. ಆ ಮೆಮೊವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಬೇಕು. ಮುಖ್ಯ ನ್ಯಾಯಮೂರ್ತಿಗಳ ಸೂಚನೆ ಅನುಸಾರ ಅರ್ಜಿಯನ್ನು ರೋಸ್ಟರ್ ಪೀಠದ (ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುವ ಪೀಠ) ಮುಂದೆ ವಿಚಾರಣೆಗೆ ನಿಗದಿಪಡಿಸಬಹುದು ಎಂದು ರಿಜಿಸ್ಟ್ರಾರ್ ಜನರಲ್‌ಗೆ ನಿರ್ದೇಶಿಸಿತು.
ಮುಸ್ಲಿಂ ಸಮದಾಯದ ವಿರುದ್ಧ ದ್ವೇಷಪೂರಿತ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೆ.ಎಸ್. ಈಶ್ವರಪ್ಪ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಸಿ.ಟಿ.ರವಿ, ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ, ಕಾಳಿಮಠದ ರಿಷಿಕುಮಾರ ಸ್ವಾಮೀಜಿ, ಯುವ ಬ್ರಿಗೇಡ್ನ ಚಕ್ರವರ್ತಿ ಸೂಲಿಬೆಲೆ ಮತ್ತು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ಆದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ:ಕಳೆದೊಂದು ವರ್ಷದಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಬಿಜೆಪಿಯವರು ಕಾನೂನು ಕೈಗೆತ್ತಿಕೊಂಡಿದ್ದಾರೆ : ಡಿಕೆಶಿ