ಬೆಂಗಳೂರು: ಸಾರ್ವಜನಿಕ ಸೇವೆಯಲ್ಲಿರುವ ವೈದ್ಯರು ಪ್ರತಿಭಟನೆ ಕೈಬಿಡದೆ ಹೋದರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರತಿಭಟನಾ ನಿರತ ವೈದ್ಯರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಾಮಾಜಿಕ ಕಾರ್ಯಕರ್ತ
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ, ಮಿಂಟೋ ಆಸ್ಪತ್ರೆ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ನಿಲ್ಲಿಸಲು, ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನವೆಂಬರ್ ಒಂದನೇ ತಾರೀಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮಕ್ಕೆ ವೈದ್ಯರು ಆಗ್ರಹಿಸುತ್ತಿದ್ದಾರೆ. ಹೀಗಾಗಿ ಕಳೆದ ನಾಲ್ಕು ದಿನಗಳಿಂದ ವಿಕ್ಟೋರಿಯಾ ಮಿಂಟೋ ಮತ್ತು ವಾಣಿವಿಲಾಸ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನ ಪ್ರಶ್ನಿಸಿ ಕೆಎಚ್ ದೇವಿಪ್ರಸಾದ್ ರೈ ಎಂಬವರು ಪ್ರತಿಭಟನೆ ನಡೆಸುತ್ತಿರುವ ವೈದ್ಯರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಈ ಪ್ರತಿಭಟನೆಯಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ದೂರದ ಊರುಗಳಿಂದ ಬಂದಿರುವ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಈ ಕೂಡಲೇ ಪ್ರತಿಭಟನೆ ಕೈಬಿಡುವಂತೆ ಅವರಿಗೆ ಸೂಚನೆ ನೀಡಬೇಕು. ಇಲ್ಲವಾದರೆ ಅವರ ವಿರುದ್ಧ ಎಸ್ಮಾ ಜಾರಿಗೊಳಿಸಬೇಕೆಂದು ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.