ಬೆಂಗಳೂರು:ಕೋವಿಡ್-19 ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳನ್ನು ಮುಂದೂಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಕೋವಿಡ್-19: ಸಿಇಟಿ ಪರೀಕ್ಷೆ ಮುಂದೂಡುವಂತೆ ಕೋರಿ ಹೈಕೋರ್ಟ್‍ಗೆ ಪಿಐಎಲ್ - ಹೈಕೋರ್ಟ್‍ಗೆ ಪಿಐಎಲ್
ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ. ಹೀಗಾಗಿ, ಪರೀಕ್ಷಾ ಪ್ರಕಟಣೆ ಹಾಗೂ ಪರೀಕ್ಷೆ ನಡೆಸಲು ರೂಪಿಸಿರುವ ಎಸ್ಓಪಿಗಳನ್ನು ರದ್ದುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ ಎಸ್.ಹನುಮಂತೇಗೌಡ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ರಾಜ್ಯದಲ್ಲಿ 2020ನೇ ಸಾಲಿನ ಸಿಇಟಿ ಪರೀಕ್ಷೆಗಳನ್ನು ಇದೇ ಜುಲೈ 30 ಹಾಗೂ ಆಗಸ್ಟ್ 1ಕ್ಕೆ ನಿಗದಿಪಡಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಳೆದ ಮೇ 13ರಂದು ಪ್ರಕಟಣೆ ಹೊರಡಿಸಿದೆ. ಹಾಗೆಯೇ ಇದಕ್ಕೆ ಪೂರಕವಾಗಿ ಜುಲೈ 18ರಂದು ಎಸ್‍ಓಪಿ ಹೊರಡಿಸಿದೆ.
ಆದರೆ, ಕೊರೊನಾ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ಹೀಗಾಗಿ, ಪರೀಕ್ಷಾ ಪ್ರಕಟಣೆ ಹಾಗೂ ಪರೀಕ್ಷೆ ನಡೆಸಲು ರೂಪಿಸಿರುವ ಎಸ್ಓಪಿಗಳನ್ನು ರದ್ದುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಅದೇ ರೀತಿ ಪಿಯುಸಿ ಅಂಕಗಳ ಆಧಾರದಲ್ಲಿ ವೃತ್ತಿ ಶಿಕ್ಷಣ ಕೋರ್ಸ್‍ಗಳಿಗೆ ಪ್ರವೇಶ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.