ಬೆಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನೆಲೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಲ್ ಪಂತ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಬುಧವಾರದಂದು ಸಭೆ ನಡೆಸಿದರು.
ನಗರದಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಬಂದ್ ಕರೆ ನೀಡಿರುವುದು ಸರಿಯಲ್ಲ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವುದು, ರಸ್ತೆಯಲ್ಲಿ ಜನರನ್ನು ಗುಂಪು ಗೂಡಿಸುವುದು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ್ ಪಂತ್ ಸಭೆಯಲ್ಲಿ ತಿಳಿಸಿದರು ಎನ್ನಲಾಗಿದೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ಮುಸ್ಲಿಂ ಮುಖಂಡರು ಬಂದ್ಗೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆ ಮುಖಂಡರ ಜೊತೆ ಸಭೆ ಮಾಡಿದ್ದೇವೆ. ಹೊರಗಡೆ ಯಾವುದೇ ಕಾರ್ಯಕ್ರಮ ಮಾಡಲ್ಲ ಅಂತಾ ಹೇಳಿದ್ದಾರೆ. ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸುವುದಿಲ್ಲ ಹಾಗೂ ಕೆಲಸಗಳಿಗೆ ಹೋಗುವವರನ್ನು ಬಲವಂತವಾಗಿ ತಡೆಯಲ್ಲ ಎಂದು ಭರವಸೆ ನೀಡಿದ್ದಾರೆ. ಅದರೂ ಕೂಡ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.