ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ 2019ರ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸು ಗೋಲಿಬಾರ್ ನಡೆಸಿದ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪಿತಸ್ಥರಲ್ಲ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ತಿಳಿಸಿದೆ.
ಈ ಕುರಿತು ಸ್ವಾತಂತ್ರ ಹೋರಾಟಗಾರ ದಿವಂಗತ ಹೆಚ್.ಎಸ್. ದೊರಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, ಮಂಗಳೂರು ಗೋಲಿಬಾರ್ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಘಟನೆಯಲ್ಲಿ ಪೊಲೀಸರು ಸೇರಿದಂತೆ ಯಾರೊಬ್ಬರು ತಪ್ಪಿತಸ್ಥರಲ್ಲ ಎಂದು ವರದಿ ಹೇಳಿದೆ. ಆ ವರದಿಯನ್ನು ಸರ್ಕಾರವೂ ಒಪ್ಪಿಕೊಂಡಿದೆ. ಅಲ್ಲದೇ ಗಲಭೆಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿದ್ದು, ದೂರುಗಳ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಇದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್, ಘಟನೆ ಸಂಬಂಧ ಪೊಲೀಸರ ವಿರುದ್ಧ 10 ದೂರುಗಳು ದಾಖಲಾಗಿವೆ. ಆದರೆ, ಒಂದೇ ಒಂದು ಪ್ರಕರಣದಲ್ಲಿ ಎಫ್‌ಐಆರ್ ಆಗಿಲ್ಲ. ತನಿಖೆ ನಡೆದಿಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಪೊಲೀಸರಿಂದ, ಪೊಲೀಸರಿಗಾಗಿ, ಪೊಲೀಸರಿಗೋಸ್ಕರ ಎಂಬಂತಿದೆ. ಪೊಲೀಸರ ವಿರುದ್ಧ ದಾಖಲಾದ ದೂರುಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಜುಲೈ ತಿಂಗಳಲ್ಲಿ ನ್ಯಾಯಾಲಯ ನಿರ್ದೇಶನ ನೀಡಿದ್ದರೂ ಸರ್ಕಾರ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ ಎಂದರು.
ವಾದ - ಪ್ರತಿವಾದ ಆಲಿಸಿದ ಪೀಠ, ಮ್ಯಾಜಿಸ್ಟ್ರೇಟ್ ತನಿಖಾ ವರದಿ, ದೂರುಗಳ ತನಿಖೆ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅದೇ ರೀತಿ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಮುಚ್ಚಿದ ಲಕೋಟೆ ತೆರೆದು ನ್ಯಾಯಾಲಯ ವರದಿ ನೋಡಿದ ಬಳಿಕ ಅದನ್ನು ಅರ್ಜಿದಾರರ ಪರ ವಕೀಲರಿಗೆ ನೀಡುವಂತೆ ಸೂಚಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ನ.30ಕ್ಕೆ ಮುಂದೂಡಿತು.
(ಮಂಗಳೂರು ಗೋಲಿಬಾರ್‌ಗೆ ಇಂದಿಗೆ ಒಂದು ವರ್ಷ..)