ಬೆಂಗಳೂರು: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಕಚ್ಚೆಟ್ಟರ ವಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ. ಮಸೀದಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.
ನಿನ್ನೆ ಬೆಳಗಾವಿ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ ಅಕ್ರೋಶ ಹೊರ ಹಾಕಿದರು. ಮುಂದಿನ ದಿನಗಳಲ್ಲಿ ಈ ಹೋರಾಟ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದ್ದು, ಹಿಂಸಾಚಾರ ಘಟನೆಗಳಿಗೆ ಆಸ್ಪದ ನೀಡದಂತೆ ರಾಜ್ಯ ಪೊಲೀಸರು ಹೈಅಲರ್ಟ್ ಆಗಿದ್ದಾರೆ.
ಪ್ರತಿಭಟನೆ ನೆಪದಲ್ಲಿ ಕೆಲ ಕಿಡಿಗೇಡಿಗಳು ಹಿಂಸಾಚಾರ ಕೃತ್ಯಗಳಿಗೆ ಪ್ರಚೋದನೆ ನೀಡಿ, ಅಹಿತಕರ ಘಟನೆ ನಡೆಸುವ ಸಾಧ್ಯತೆಯಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಹಿನ್ನೆಲೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಿರಿಯ ಪೊಲೀಸರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿ ನಿರ್ದೇಶನ ನೀಡಿದ್ದಾರೆ. ತಾತ್ಕಾಲಿಕವಾಗಿ ಪ್ರತಿಭಟನೆ, ಧರಣಿಗಳಿಗೆ ಅನುಮತಿ ನೀಡದಿರಲು ತೀರ್ಮಾನಿಸಿದ್ದಾರೆ. ಜೊತೆಗೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ಎಚ್ಚರ ವಹಿಸುವಂತೆ ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್: ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಉಡುಪಿ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಗತ್ಯಕ್ಕನುಗುಣವಾಗಿ ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲು ತಿಳಿಸಲಾಗಿದೆ.
ಧಾರ್ಮಿಕ ಕೇಂದ್ರಗಳ ಸುತ್ತಮುತ್ತ ಗಸ್ತು ಹೆಚ್ಚಿಸಬೇಕು. ಮುಸ್ಲಿಂ ಮುಖಂಡರು ಹಾಗೂ ಮೌಲ್ವಿಗಳು ಸೇರಿ ಧರ್ಮದ ನಾಯಕರೊಂದಿಗೆ ಶಾಂತಿಪಾಲನಾ ಸಭೆ ನಡೆಸಬೇಕು. ಸುಗಮ ಕಾನೂನು ಸುವ್ಯವಸ್ಥೆ ಬಗ್ಗೆ ಸ್ಥಳೀಯ ಪೊಲೀಸರು ತಿಳಿವಳಿಕೆ ಮೂಡಿಸಬೇಕೆಂದು ಆಯಾ ಜಿಲ್ಲಾ ಎಸ್ಗಳಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಾಕೀತು ಮಾಡಿದ್ದಾರೆ.
ಪ್ರಚೋದನೆ ನೀಡದರೆ ಕ್ರಮ ಕೈಗೊಳ್ಳಿ: ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆ ವಿರೋಧಿಸುವ ಭರದಲ್ಲಿ ಯಾರಾದರೂ ಅಹಿತಕರ ಘಟನೆಗಳಿಗೆ ಪ್ರಚೋದನೆ ನೀಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪ್ರಮುಖವಾಗಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗುವ ಪೋಸ್ಟ್ ಹಾಕಿ, ಪರೋಕ್ಷವಾಗಿ ಹಿಂಸಾಚಾರಕ್ಕೆ ಪ್ರಚೋದಿಸುವುದು ಕಂಡುಬಂದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಸುಳ್ಳು ಸುದ್ದಿ ಹಬ್ಬಿಸುವುದು, ಹಿಂಸೆಗೆ ಪ್ರೇರಣೆಯಾಗುವ ಸಂದೇಶ ಹರಿಬಿಡುವುದು, ವಾಕ್ ಸ್ವಾತಂತ್ರ್ಯ ಸೋಗಿನಲ್ಲಿ ಹೇಳಿಕೆ ಅಥವಾ ಭಾಷಣ ಮಾಡಿ ವಿಡಿಯೋ ವೈರಲ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.
ರಾಜ್ಯದ ಶಕ್ತಿ ಕೇಂದ್ರವಾಗಿರುವ ಬೆಂಗಳೂರು ನಗರದಲ್ಲಿ ಸಹ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಎಲ್ಲ ಡಿಸಿಪಿಗಳಿಗೆ ಸೂಚಿಸಿದ್ದಾರೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ಶಾಂತಿ ಸಭೆ ನಡೆಸುವಂತೆ ಸೂಚಿಸಲಾಗಿದೆ. ಆಕ್ಷೇಪಾರ್ಹ ವಿಚಾರವಾಗಿ ಪ್ರತಿಭಟನೆ ನಡೆಸುವ ಸಂಘಟನೆಗಳಿಗೆ ಅನುಮತಿ ನೀಡದಿರುವಂತೆ ಆಯುಕ್ತರು ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ನೂಪುರ್ ಹೇಳಿಕೆ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರ.. ರಾಂಚಿಯಲ್ಲಿ ಇಬ್ಬರು ಸಾವು