ಬೆಂಗಳೂರು:ಖಾಲಿ ಇರುವ ಸರ್ಕಾರಿ ಅಭಿಯೋಕರ ಹುದ್ದೆಗಳನ್ನು ಭರ್ತಿ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಅದರಂತೆ, 19 ಸರ್ಕಾರಿ ಅಭಿಯೋಜಕರು, 28 ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೈಕೋರ್ಟ್‌ಗೆ ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿ ಖಾಲಿ ಇರುವ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌ಗಳ ಕೊರತೆ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಖಾಲಿ ಇದ್ದ 24 ಸರ್ಕಾರಿ ಅಭಿಯೋಜಕರ ಹುದ್ದೆಗಳ ಪೈಕಿ 19 ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಅರ್ಹರು ಸಿಗದ ಕಾರಣ 5 ಹುದ್ದೆಗಳಿಗೆ ನೇಮಕಾತಿ ಸಾಧ್ಯವಾಗಿಲ್ಲ. ನಿವೃತ್ತ ಸರ್ಕಾರಿ ಅಭಿಯೋಜಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಂಡರೂ ಯಾರೊಬ್ಬರೂ ಸಿಗಲಿಲ್ಲ.
ಅದೇ ರೀತಿ 58 ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಪೈಕಿ 28 ಮಂದಿಯನ್ನು ನೇಮಕ ಮಾಡಲಾಗಿದೆ. ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗಳ ನೇಮಕಾತಿಗೆ ರಾಷ್ಟ್ರೀಯ ಕಾನೂನು ಶಾಲೆ ಪ್ರಾಥಮಿಕ ಹಂತದ ಪರೀಕ್ಷೆ ನಡೆಸಿದೆ. ಡಿಸೆಂಬರ್ ಅಂತ್ಯದೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.
ಮಾಹಿತಿ ದಾಖಲಿಸಿಕೊಂಡ ಪೀಠ ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.