ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿದೆ. ರಾಜ್ಯಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ವಿಪ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ವಿಧಾನಸಭೆ ಪ್ರತಿ ಪಕ್ಷದ ಮುಖ್ಯಸಚೇತಕ ಅಜಯ್ ಧರ್ಮಸಿಂಗ್ ಆದೇಶ ಹೊರಡಿಸಿದ್ದಾರೆ. ಜೂನ್ 10ರಂದು ನಡೆಯುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಪ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದಿಂದ ಮೊದಲ ಅಭ್ಯರ್ಥಿಯಾಗಿ ಜೈರಾಮ್ ರಮೇಶ್ ಹಾಗೂ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ಕಣಕ್ಕಿಳಿದಿದ್ದು, ನಮ್ಮ ಪಕ್ಷದಿಂದ ಸ್ಪರ್ಧಿಸಿರುವ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದು ವಿಪ್ನಲ್ಲಿ ತಿಳಿಸಲಾಗಿದೆ. ರಾಜ್ಯಸಭೆ ಚುನಾವಣೆ ನಡೆಯುವ ಮತದಾನದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದು ಸಂದೇಶ ನೀಡಿದ್ದು, ಈ ಮೂಲಕ ತಮಗೆ ವಿಪ್ ಜಾರಿಗೊಳಿಸಲಾಗಿದೆ ಎಂದಿದ್ದಾರೆ.
ರಾಜ್ಯ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ ಒಟ್ಟು 224 ಸದಸ್ಯರ ಬಲ ಹೊಂದಿರುವ ರಾಜ್ಯ ವಿಧಾನಸಭೆಯಿಂದ 4 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದ್ದು, ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್ನಿಂದ ಒಬ್ಬ ಸದಸ್ಯ ಸುಗಮವಾಗಿ ಆಯ್ಕೆಯಾಗುವ ಸದಸ್ಯ ಬಲ ಹೊಂದಿದ್ದಾರೆ. ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿಯಿಂದ ತಲಾ ಒಬ್ಬೊಬ್ಬ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹಾಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಳಿಕ ಬಿಜೆಪಿ ಬಳಿ 32, ಕಾಂಗ್ರೆಸ್ಸಲ್ಲಿ 25 ಸದಸ್ಯ ಬಲ ಉಳಿದುಕೊಳ್ಳಲಿದೆ. ಜೆಡಿಎಸ್ ಸಹ 32 ಸದಸ್ಯರ ಬಲ ಹೊಂದಿದ್ದು ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಈ ಹಿನ್ನೆಲೆ ನಾಲ್ಕನೇ ಸ್ಥಾನಕ್ಕೆ ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ, ಕಾಂಗ್ರೆಸ್ನ ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಲೆಹರ್ ಸಿಂಗ್ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲಿದ್ದಾರೆ. ಹೀಗಾಗಿ ಅಡ್ಡಮತದಾನ ನಡೆಯುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ತಮ್ಮ ಸದಸ್ಯರಿಗೆ ಜಾರಿಗೊಳಿಸಲು ತೀರ್ಮಾನಿಸಿವೆ. ಕಾಂಗ್ರೆಸ್ ಪಕ್ಷ ತನ್ನ ಸದಸ್ಯರಿಗೆ ಈಗಾಗಲೇ ವಿಪ್ ಜಾರಿ ಮಾಡಿದೆ. ಉಳಿದ ಎರಡು ಪಕ್ಷಗಳು ಸದ್ಯವೇ ವಿಪ್ ಜಾರಿ ಮಾಡಲಿವೆ.
ಇದನ್ನೂ ಓದಿ:ಮೋದಿ ಅಧಿಕಾರಕ್ಕೆ ಬಂದ ನಂತರ ದೇಶಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ: ಶೋಭಾ ಕರಂದ್ಲಾಜೆ