ಬೆಂಗಳೂರು :ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಂಬಂಧ ಎಂಟು ವಾರಗಳಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಯಾದಗಿರಿಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟ ವಿಮೆ ಪರಿಹಾರ ವಿತರಿಸಿಲ್ಲ ಎಂದು ಆಕ್ಷೇಪಿಸಿ ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸಲ್ಲಿಸಿದ ಪ್ರಮಾಣ ಪತ್ರವನ್ನು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದರು. ನಂತರ ಪೀಠಕ್ಕೆ ಮಾಹಿತಿ ನೀಡಿ, ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಅವಕಾಶ ಇಲ್ಲ ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಇದೇ ಮಾತನ್ನು ಈ ಹಿಂದೆಯೂ ಹೇಳಿದ್ದೀರಿ.
ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳು ಹಾಗೂ ಸಹಕಾರಿ ಹಣಕಾಸು ಸಂಸ್ಥೆಗಳಿಂದ ಪಡೆದುಕೊಂಡ ಸಾಲ ಮರುಪಾವತಿಸಲಾಗದೆ ರೈತರು ಆತ್ಮಹತ್ಯೆ ಮಾಡಿಕೊಂಡರೆ, ಅಂಥವರ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡುತ್ತದೆ. ಆದರೆ, ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ಮರು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡದಿರುವುದು ತಾರತಮ್ಯ ಆಗುತ್ತೆ. ಈ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಕಳೆದ ಬಾರಿಯೇ ನಿರ್ದೇಶಿಸಿದ್ದರೂ, ಸರ್ಕಾರ ಏಕೆ ಪರಿಗಣಿಸಿಲ್ಲ ಎಂದು ಪ್ರಶ್ನಿಸಿತು.
ಸರ್ಕಾರಿ ವಕೀಲರು ಉತ್ತರಿಸಿ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳು ಹಾಗೂ ಸಹಕಾರಿ ಹಣಕಾಸು ಸಂಸ್ಥೆಗಳಿಂದ ಪಡೆದುಕೊಂಡ ಸಾಲಕ್ಕೆ ನಿರ್ದಿಷ್ಟ ದಾಖಲೆ ಹಾಗೂ ಮಾಹಿತಿ ಲಭ್ಯವಾಗಿರುತ್ತದೆ. ಖಾಸಗಿ ಲೇವಾದೇವಿಯವರಿಂದ ಯಾವ ರೈತ, ಎಷ್ಟು ಸಾಲ ಪಡೆದಿದ್ದಾನೆ ಎಂಬುದಕ್ಕೆ ನಿರ್ದಿಷ್ಟ ಮಾಹಿತಿ ಹಾಗೂ ದಾಖಲೆ ಇರುವುದಿಲ್ಲ. ಮೇಲಾಗಿ ಖಾಸಗಿ ಲೇವಾದೇವಿ ಅವರಿಂದ ಸಾಲ ಪಡೆಯುವುದನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.
ಸರ್ಕಾರದ ಪರ ವಕೀಲರ ವಾದ ಒಪ್ಪದ ಪೀಠ, ಕೃಷಿ ಉದ್ದೇಶಕ್ಕೆ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಪಾವತಿಸುವಲ್ಲಿ ತಾರತಮ್ಯ ಮಾಡುವುದು ಸಂವಿಧಾನದ ವಿಧಿ 14ರ ಅಡಿ ಲಭ್ಯವಿರುವ ಸಮಾನತೆ ಹಕ್ಕಿನ ಉಲ್ಲಂಘನೆಯಾಗುತ್ತದೆ.
ಆದ್ದರಿಂದ ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರವನ್ನು ನೀತಿ ನಿರ್ಣಯ ಕೈಗೊಳ್ಳುವ ಅಧಿಕಾರವಿರುವ ಸೂಕ್ತ ಪ್ರಾಧಿಕಾರದ ಮುಂದಿಟ್ಟು, ಎಂಟು ವಾರಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.