ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 25% ರಷ್ಟು ಸೀಟು ಮೀಸಲಿರಿಸಿ ರಾಜ್ಯ ಸರ್ಕಾರ ವಿವಿ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಭಾರತೀಯ ವಕೀಲರ ಪರಿಷತ್ ಹಾಗೂ ಕೆಲ ಕಾನೂನು ಪದವಿ ಆಕಾಂಕ್ಷಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ಮಧ್ಯಂತರ ಆದೇಶ ನೀಡಿದೆ.
ಆದರೆ, ಪ್ರವೇಶ ಸೀಟುಗಳ ಸಂಖ್ಯೆಯನ್ನು 80 ರಿಂದ 120ಕ್ಕೆ ಹೆಚ್ಚಳ ಮಾಡಿ ಎನ್‌ಎಲ್‌ಎಸ್‌ಐಯು ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ ನೀಡದ ಹೈಕೋರ್ಟ್, ಪರಿಷ್ಕೃತ ಸೀಟುಗಳಿಗೆ ನಿಯಮಾನುಸಾರ ಪ್ರವೇಶ ಪ್ರಕ್ರಿಯೆ ಮುಂದುವರಿಸಬಹುದು ಆದರೆ, ಹೈಕೋರ್ಟ್ ಅಂತಿಮ ಆದೇಶಕ್ಕೆ ಎನ್‌ಎಲ್‌ಎಸ್‌ಐಯು ನಡೆಸುವ ಎಲ್ಲ ಪ್ರವೇಶ ಪ್ರಕ್ರಿಯೆಗಳು ಒಳಪಟ್ಟಿರುತ್ತವೆ ಎಂದು ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಕಾಯ್ದೆಗೆ ಕಳೆದ ಮಾರ್ಚ್‌ನಲ್ಲಿ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ, ವಿವಿಯಲ್ಲಿ ಕನ್ನಡಿಗ ವಿದ್ಯಾರ್ಥಿಗಳಿಗೆ ಶೇ. 25 ಸೀಟುಗಳನ್ನು ಮೀಸಲಿಟ್ಟಿದೆ. ತಿದ್ದುಪಡಿ ಕಾನೂನಿನ ಪ್ರಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿವಿಯ ಪ್ರವೇಶ ಪರೀಕ್ಷೆ ಪಾಸ್ ಮಾಡುವ ಮೂಲಕ ಸೀಟು ಪಡೆದುಕೊಳ್ಳಬಹುದಾಗಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಲಾಗಿದೆ.