ಬೆಂಗಳೂರು : ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು. ಕಾನೂನಾತ್ಮಕವಾಗಿ ಪರಿಶೀಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಿದರು.