ಬೆಂಗಳೂರು:ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ವಿಷಯಾಂತರ ಮಾಡಲು ಮತಾಂತರ ಗುಮ್ಮವನ್ನು ತಂದು ನಿಲ್ಲಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜ ಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ ಎಂದು ಹೇಳಿದ್ದಾರೆ.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗವು ಸಂವಿಧಾನದ ಒಂದು ಅಂಗ. ಈಗ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನ ಮಾಡಲಾಗುತ್ತಿದೆ. ಇದು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುವವರ ದರ್ಪದ ಹೆಜ್ಜೆಯಷ್ಟೇ. ಅವರ ದುರುದ್ದೇಶ ಸ್ಪಷ್ಟ ಎಂದಿದ್ದಾರೆ.
ಈ ಮಧ್ಯೆ ಮಾನ್ಯ ಸ್ಪೀಕರ್ ಅವರು ಮಾಧ್ಯಮ ನಿರ್ಬಂಧದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಹಾಗಾದರೆ ನಿರ್ಬಂಧ ಹೇರಿದವರು ಯಾರು? ಸ್ಪೀಕರ್ ಅವರಿಗೆ ಗೊತ್ತಿಲ್ಲದೆ ನಿರ್ಬಂಧದ ಸಂದೇಶ ಮಾಧ್ಯಮಗಳಿಗೆ ಕೊಟ್ಟವರು ಯಾರು? ಈ ಬಗ್ಗೆ ಜನರಿಗೆ ಸತ್ಯಾಂಶ ಗೊತ್ತಾಗಬೇಕಿದೆ ಎಂದು ಹೆಚ್‌ಡಿಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ.. 'ಸಿದ್ದಕಲೆ'ಯ ನಿಷ್ಣಾತರಿಗೆ ಸುಳ್ಳೇ ದೇವರು : HDK ಕಿಡಿ