ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆಯು ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಅವರ ಪಾಠ ಕೈ ಬಿಡುವ ನಿರ್ಧಾರವನ್ನು ಹಿಂಪಡೆಯುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳ ಪಠ್ಯದ ಹೊರೆ ಕಡಿಮೆ ಮಾಡಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಇದನ್ನೇ ಅವಕಾಶವನ್ನಾಗಿ ಬಳಸಿಕೊಂಡು ಶಾಲಾ ಮಕ್ಕಳ ಪಠ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ದೇಶಭಕ್ತ ಟಿಪ್ಪು ಸುಲ್ತಾನ್ ಅವರ ಪಠ್ಯವನ್ನು ಕೈಬಿಡಲು ಮುಂದಾಗಿರುವುದು ವಿಷಾದನೀಯ. ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರ ಈ ರೀತಿಯ ಕೇಸರೀಕರಣ ಮತ್ತು ಕೋಮುವಾದದ ನಿರ್ಧಾರಗಳನ್ನು ತೆಗೆದುಕೊಳ್ಳುವ ಬದಲು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಗಮನಹರಿಸುವುದು ಸೂಕ್ತ ಎಂದಿದ್ದಾರೆ.
ಟಿಪ್ಪು ಸುಲ್ತಾನ್ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಬದಲಾಗಿ ಅವರು ಈ ದೇಶದ ಇತಿಹಾಸದ ಭಾಗವಾಗಿದ್ದಾರೆ. ಟಿಪ್ಪು ಅವರ ಹೆಸರಿಲ್ಲದೆ ದೇಶದ ಚರಿತ್ರೆ ಅಪೂರ್ಣವಾಗುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಕೊಡುಗೆ ಅಪಾರವಾಗಿದೆ. ನಮ್ಮ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಕರ್ನಾಟಕ ವಿಧಾನಮಂಡಲದಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದಾಗ, ಟಿಪ್ಪು ಸುಲ್ತಾನ್ ಅವರು ರಾಜ್ಯಕ್ಕೆ ನೀಡಿದ ಕೊಡುಗೆ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಕೊಂಡಾಡಿದ್ದಾರೆ ಎಂದಿದ್ದಾರೆ.
ಟಿಪ್ಪು ಸುಲ್ತಾನ್ ಅವರನ್ನು ಭಾರತೀಯ ಜನತಾ ಪಕ್ಷದ ನಾಯಕರು ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರವು ತನ್ನ ರಾಜಕೀಯ ಉದ್ದೇಶ ಈಡೇರಿಸಿಕೊಳ್ಳುವ ಸಲುವಾಗಿ ಇತಿಹಾಸವನ್ನು ತಿರುಚಲು ಮುಂದಾಗಿರುವುದು ಖಂಡನೀಯ. ಸರ್ಕಾರ ಕೂಡಲೇ ತನ್ನ ಈ ನಿರ್ಧಾರವನ್ನು ಹಿಂಪಡೆದು ಶಾಲಾ ಮಕ್ಕಳ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಅವರ ಪಾಠಗಳನ್ನು ಮುಂದುವರೆಸಬೇಕೆಂದು ಸಿಎಂಗೆ ಸಲೀಂ ಅಹಮದ್ ಆಗ್ರಹಿಸಿದ್ದಾರೆ.