ಬೆಂಗಳೂರು:ರಾಜರತ್ನ ಪುನೀತ್ ರಾಜಕುಮಾರ್ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಪ್ರಕ್ರಿಯೆಗಳು ಆರಂಭವಾಗಿವೆ. ಇನ್ನು ಕೆಲ ಹೊತ್ತಿನಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ.
ಸಿಎಂ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದ್ದು, ಕೇವಲ ಗಣ್ಯರು, ಬಂಧುಗಳು ಹಾಗೂ ಆಪ್ತರಿಗೆ ಮಾತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈಡಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರದ ವಿಧಿವಿಧಾನಗಳು ನೆರವೇರುತ್ತಿವೆ.
ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮಕ್ಕಳಾದ ಧೃತಿ ಹಾಗ ವಂದಿತಾ, ನಟರಾದ ಯಶ್, ಗಣೇಶ್, ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೇರಿ ಹಲವರು ಅಂತಿಮ ನಮನ ಸಲ್ಲಿಸಿದ್ದಾರೆ.
ಸರ್ಕಾರಿ ಗೌರವ ನೀಡಲು ಪೊಲೀಸ್ ವಾದ್ಯವೃಂದ ಸಜ್ಜಾಗಿದ್ದು, ಮೂರು ಸುತ್ತು ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆ ನುಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತಿ ಸ್ಥಳದಲ್ಲಿದೆ.