ಬೆಂಗಳೂರು:ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿ ವಿಚಾರದಲ್ಲಿ ಉಂಟಾಗಿರುವ ಹಿನ್ನೆಡೆಯ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯ ವಿವಾದ ಇತ್ಯರ್ಥಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂಕೋರ್ಟ್ ಆದೇಶದಿಂದ ಸಾಮಾಜಿಕ ನ್ಯಾಯಕ್ಕೆ ಗಂಡಾಂತರ ಎದುರಾಗಿದೆ. ಇದರಿಂದ ಹಿಂದುಳಿದ ಜಾತಿಗಳು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಲಿದ್ದಾರೆ ಎಂದಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಕರ್ನಾಟಕ ರಾಜ್ಯಕ್ಕೂ ಸಂಬಂಧಿಸಿರುವ ಕಾರಣ ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ನ್ಯಾಯಾಲಯದ ಗಮನಕ್ಕೆ ತರಬೇಕು. ಈ ಬಗ್ಗೆ ಮುಂದಿನ ಕ್ರಮದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಭಿನ್ನವಾಗಿದೆ. ಇಲ್ಲಿ ಈಗಾಗಲೇ ರಾಜ್ಯ ಸರ್ಕಾರ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಇದರ ಆಧಾರದಲ್ಲಿ ಕಡಿಮೆ ಅವಧಿಯಲ್ಲಿ ಹೊಸ ರಾಜಕೀಯ ಮೀಸಲಾತಿಯನ್ನು ರೂಪಿಸಲು ಸಾಧ್ಯವಿದೆ ಎಂದಿದ್ದಾರೆ.