ಕರ್ನಾಟಕ

karnataka

ETV Bharat / city

ಮತಾಂತರ ನಿಷೇಧದ ಸುಗ್ರೀವಾಜ್ಞೆಗೆ ಸಿದ್ದರಾಮಯ್ಯ ಕಿಡಿ ; ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರಿಗೆ ಮನವಿ

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ..

Opposition leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ

By

Published : May 13, 2022, 12:59 PM IST

ಬೆಂಗಳೂರು :ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ಪ್ರತಿಪಕ್ಷ ‌ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ.

ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಎಂದು ಪ್ರಶ್ನಿಸಿದ್ದಾರೆ.

ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು. ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್​ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ?. ಸ್ವಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ?.

ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದೆ. ಈ ಕಾಯ್ದೆಯ ವಿರುದ್ದ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಬಿಎಸ್​ವೈ ಭೇಟಿ ಮಾಡಿದ ಸಿಎಂ ಬೊಮ್ಮಾಯಿ: ಚುನಾವಣೆ ಕುರಿತು ಉಭಯ ನಾಯಕರ ಚರ್ಚೆ

ABOUT THE AUTHOR

...view details