ಬೆಂಗಳೂರು: 'ಕಾಡು ಕುದುರೆ ಓಡಿ ಬಂದಿತ್ತಾ' ಖ್ಯಾತಿಯ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ 'ಕಾಡು ಕುದುರೆ ಓಡಿ ಬಂದಿತ್ತಾ' ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.
ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು ಇನ್ನಷ್ಟು ಎತ್ತರಕ್ಕೆ ಒಯ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರಿಗೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಸಂತಾಪ:ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ವಿಧಾನಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್ಆರ್ ಪಾಟೀಲ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ.
(ಓದಿ: ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ)