ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪನವರು ಧರ್ಮದ ಹೆಸರಿನಲ್ಲಿ ರಾಜ್ಯದಲ್ಲಿ ಕಿಚ್ಚು ಹೊತ್ತಿಸಲು ಮುಂದಾಗಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಮುಸ್ಲಿಮರಿಗೆ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಎಸ್.ಆರ್ ಪಾಟೀಲ್, ಬಿಜೆಪಿ ಸಚಿವರ ಬಾಯಿಯಲ್ಲಿ ಇದೆಂಥಾ ಅ'ಧರ್ಮ'ದ ಮಾತು?. ಬೆಳಗಾವಿ ಲೋಕಸಭೆ ಕ್ಷೇತ್ರದ ಟಿಕೆಟ್ ಅನ್ನು ಕುರುಬರಿಗೋ, ಲಿಂಗಾಯತರಿಗೋ, ಒಕ್ಕಲಿಗರಿಗೋ, ಬ್ರಾಹ್ಮಣರಿಗೋ ಕೊಡ್ತೇವೆ. ಆದರೆ ಮುಸ್ಲಿಮರಿಗೆ ಕೊಡಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಅ'ಧರ್ಮ'ದ ಕಿಚ್ಚು ಹೊತ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.