ಬೆಂಗಳೂರು:ರಾಜ್ಯ ಕಾಂಗ್ರೆಸ್ ನಾಯಕರು ದಿಲ್ಲಿಗೆ ತೆರಳಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ವಾಪಸಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಇಂದು ನಗರಕ್ಕೆ ಭೇಟಿ ನೀಡಲಿದ್ದಾರೆ.
ಮುಂಬರುವ ದಿನಗಳಲ್ಲಿ ಎದುರಾಗುವ ಚುನಾವಣೆಗಳು ಹಾಗೂ ಪಕ್ಷ ಸಂಘಟನೆ, ಕೆಪಿಸಿಸಿ ವಿವಿಧ ಸಮಿತಿಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ ಹಾಗೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಗಳ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚಿಸುವ ಸಲುವಾಗಿ ರಾಜ್ಯಕ್ಕೆ ಮೂರು ದಿನದ ಪ್ರವಾಸ ನಿಮಿತ್ತ ಆಗಮಿಸುತ್ತಿದ್ದಾರೆ. ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಇಂದು ಸಂಜೆ ಬೆಂಗಳೂರಿಗೆ ಆಗಮಿಸುವ ಸುರ್ಜೆವಾಲಾ, ನಾಳೆಯಿಂದ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ.
ಲಿಂಗಾಯತ ಸಮುದಾಯ ಸೆಳೆಯುವ ಯತ್ನ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಸಂಬಂಧ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಮುಂಬರುವ ದಿನಗಳಲ್ಲಿ ಲಿಂಗಾಯತ ಸಮುದಾಯದವರನ್ನು ಕಾಂಗ್ರೆಸ್ನತ್ತ ಸೆಳೆಯಲು ಯಾವ ರೀತಿ ಕಾರ್ಯತಂತ್ರ ಹೆಣೆಯಬಹುದು ಎಂಬ ಕುರಿತು ಸಹ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಇದೆ. ಹಿಂದೆ ಕಾಂಗ್ರೆಸ್ ಪಕ್ಷದಿಂದ ವೀರೇಂದ್ರ ಪಾಟೀಲ್ಗೆ ಅನ್ಯಾಯವಾಗಿದೆಯೆಂದು ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದ ಲಿಂಗಾಯತ ಸಮುದಾಯ, ಕಳೆದ ಮೂರು ದಶಕಗಳಿಂದ ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ ಬೆಂಬಲವಾಗಿ ನಿಂತಿದೆ. ಈ ಮತದಾರ ಸಮುದಾಯವನ್ನು ಇದೀಗ ಸೆಳೆಯಲು ಕಾಂಗ್ರೆಸ್ಗೆ ಒಂದು ಸದಾವಕಾಶ ದೊರಕಿದ್ದು, ಅದನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳಬಹುದು ಎಂಬ ಕುರಿತು ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಸುರ್ಜೆವಾಲಾ ಚರ್ಚಿಸಲಿದ್ದಾರೆ.
ಮೂರು ದಿನಗಳ ಪ್ರವಾಸ
ಇಂದು ಸಂಜೆ ಬೆಂಗಳೂರಿಗೆ ಆಗಮಿಸುವ ರಣದೀಪ್ ಸುರ್ಜೆವಾಲಾ, ನಾಳೆಯಿಂದ ಮೂರು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಮಂಗಳೂರಿನಲ್ಲಿ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಎಲ್ಲ ಮುಖಂಡರ ಜೊತೆ ಸಭೆ ನಡೆಸುತ್ತಾರೆ. 24ರಂದು ತುಮಕೂರಿನಲ್ಲಿ ದಾವಣಗೆರೆ, ಚಿಕ್ಕಮಗಳೂರು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಮುಖರ ಸಭೆ ನಡೆಸಲಿರುವ ಸುರ್ಜೇವಾಲಾ, ಹಾಲಿ ಮತ್ತು ಮಾಜಿ ಶಾಸಕರು, ಮಂತ್ರಿಗಳು, 2018ರ ಪರಾಜಿತ ಅಭ್ಯರ್ಥಿಗಳು, ಕಾಂಗ್ರೆಸ್ ನ ವಿವಿಧ ಶಾಖೆಯ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.