ಬೆಂಗಳೂರು : ಸರ್ಕಾರಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ 2020-21 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
2016-17ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಸಿಲುಕಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಲೇಹಳ್ಳಿ ಸರ್ಕಾರಿ ಪ್ರೌಢ ಮತ್ತು ಪ್ರಾರ್ಥಮಿಕ ಶಾಲಾ ಶಿಕ್ಷಕ ಬಿ.ಎನ್.ಮಹೇಶ್ವರಪ್ಪ ಮತ್ತಿತರರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೆಎಟಿ ಹಂಗಾಮಿ ಅಧ್ಯಕ್ಷ ನ್ಯಾ.ಆರ್.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ಶಿವಶೈಲಂ ಅವರಿದ್ದ ಪೀಠ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಿ ವಿಚಾರಣೆಯನ್ನು ಡಿ.23ಕ್ಕೆ ಮುಂದೂಡಿತು.
ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಅರುಣ ಶಹಾಪುರ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಅರ್ಜಿದಾರರ ಕೋರಿಕೆ ಏನು?
2016-17ನೇ ಸಾಲಿನ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಶಿಕ್ಷಕರು ತೊಂದರೆಗೆ ಸಿಲುಕಿದ್ದಾರೆ. ಕಳೆದ 3 ವರ್ಷಗಳಿಂದ ಕಾರಣಾಂತರಗಳಿಂದ ವರ್ಗಾವಣೆ ಪ್ರಕ್ರಿಯೆ ನಡೆದಿರಲಿಲ್ಲ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಗೆ ಕೌನ್ಸೆಲಿಂಗ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆದರೆ ಈ ಅರ್ಜಿಗಳನ್ನು ಸಲ್ಲಿಸಲು 2019-20ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಸಿಲುಕಿರುವವರಿಗೆ ಮೊದಲ ಆದ್ಯತೆ ನೀಡದಿರುವುದು ನಿಯಮ ಬಾಹಿರವಾಗಿದೆ. ಆದ್ದರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿನ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪೀಠ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.