ಬೆಂಗಳೂರು:ಟಿವಿ, ಬೈಕ್ ಇರುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸ್ತೀವಿ ಎಂದು ಹೇಳುವ ಮೂಲಕ ಆಹಾರ ಸಚಿವ ಉಮೇಶ್ ಕತ್ತಿ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡರು. ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬಿಪಿಎಲ್ ಕಾರ್ಡ್ಗೆ ಹಿಂದಿನ ನಿಯಮಗಳೇ ಅನ್ವಯ ಆಗುತ್ತೆ ಅನ್ನುವ ಮೂಲಕ ವಿವಾದಕ್ಕೆ ತೆರೆ ಎಳೆದರು.
ಬಿಪಿಎಲ್ ಕಾರ್ಡ್ ಪಡೆಯಲು ಇರುವ ಮಾನದಂಡಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಅನಧಿಕೃತವಾಗಿ ಬಿಪಿಎಲ್ ಕಾರ್ಡ್ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಕುಟುಂಬಗಳು ಮಾರ್ಚ್ ಒಳಗಾಗಿ ಸ್ವಯಂ ಪ್ರೇರಿತವಾಗಿ ಬಿಪಿಎಲ್ ಕಾರ್ಡುಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವಂತೆ ಮಾಧ್ಯಮಗಳ ಮೂಲಕ ಮನವಿ ಮಾಡಿರುತ್ತೇನೆ. ಒಂದುವೇಳೆ ಕಾಲಾವಧಿಯೊಳಗೆ ಹಿಂದಿರುಗಿಸದಿದ್ದರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಉಮೇಶ್ ಕತ್ತಿ ಸಮಾಜಾಯಿಷಿ ನೀಡಿದರು. (ಇದನ್ನೂ ಓದಿ: ಸಾಮಾನ್ಯ ಜನರಿಗೆ ಬಿಗ್ ಶಾಕ್.. ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು!)
ಅಷ್ಟಕ್ಕೂ ಮಾನದಂಡ ಏನು ಹೇಳುತ್ತೆ?: 2017ಕ್ಕೆ ಹೊರಡಿಸಿದ ಪರಿಷ್ಕೃತ ಮಾನದಂಡದ ಪ್ರಕಾರ ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸಂಸ್ಥೆಗಳು/ಮಂಡಳಿಗಳು ನಿಗಮಗಳು, ಆದಾಯ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹವಲ್ಲ.
ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹವಲ್ಲ.
ಇನ್ನು ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿಗೆ ಅರ್ಹವಲ್ಲ.