ಬೆಂಗಳೂರು: ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಜೆಡಿಎಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸುವ ಸಾಧ್ಯತೆ ಇದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಬಂಡೆಪ್ಪ ಕಾಶಂಪೂರ, ಬಸವರಾಜ ಹೊರಟ್ಟಿ ಸೇರಿದಂತೆ 28 ಮಂದಿ ನಾಯಕರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿದ್ದಲ್ಲದೆ, ಕಳೆದ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಚುನಾವಣೆಯಲ್ಲಿ ಭಾರಿ ಹಿನ್ನಡೆ ಉಂಟಾದ ನಂತರ ಸರ್ಕಾರವೂ ಪತನವಾಯಿತು. ಈಗ ಕಾಂಗ್ರೆಸ್ ಸಹವಾಸವೇ ಬೇಡ ಎಂಬ ನಿರ್ಧಾರಕ್ಕೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಬಂದಿದ್ದಾರೆ.
ಮಿನಿ ಸಮರವೆಂದೇ ಬಿಂಬಿತವಾಗಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಜೆಡಿಎಸ್ ನಿರ್ಧರಿಸಿದೆ.
ಈಗಾಗಲೇ ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಕೆ.ಆರ್.ಪುರಂ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಡೆಸಿ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜವರಾಯಿಗೌಡ ಅವರನ್ನೇ ಈ ಬಾರಿಯೂ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಶಿವಾಜಿನಗರ ಕ್ಷೇತ್ರದಿಂದ ಸ್ಪರ್ಧಿಸಲು ತನ್ವೀರ್ ಅಹಮ್ಮದ್, ಇಮ್ರಾನ್ ಪಾಷ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಆಕಾಂಕ್ಷಿಗಳಾಗಿದ್ದಾರೆ. ಇನ್ನು ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ರಾಚೇನಹಳ್ಳಿ ಕೃಷ್ಣಮೂರ್ತಿ ಸೇರಿದಂತೆ ಹಲವರು ಒಲವು ತೋರಿಸಿದ್ದಾರೆ. ಈಗಾಗಲೇ ಪಕ್ಷದ ವರಿಷ್ಠರು ಘೋಷಿಸಿರುವಂತೆ ಉಪ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.