ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿರುವ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತಕ್ಷಣ ವಶಕ್ಕೆ ಪಡೆದು ಅಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಬೇಕು ಎಂದು ಜಿಲ್ಲಾಡಳಿತಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಅವರು ಪರಿಶೀಲಿಸಿದರು.
ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆ ವೈದ್ಯರ ಜೊತೆ ಸಭೆ ನಡೆಸಿ ಕೋವಿಡ್ ಚಿಕಿತ್ಸಾ ವ್ಯವಸ್ಥೆ ಅವಲೋಕಿಸಿ ಮಾರ್ಗದರ್ಶನ ನೀಡಬೇಕು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪ್ಯಾಕೇಜ್ ಹೆಸರಿನಲ್ಲಿ ಹೆಚ್ಚಿನ ಹಣ ವಸೂಲಿ ಮಾಡುವ ದಂಧೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹೇಗೆ ಜಾರಿಗೊಳಿಸಬೇಕು ಎಂಬುದರ ಬಗ್ಗೆ ಈ ಸಭೆಯಲ್ಲಿ ಸವಿಸ್ತಾರವಾಗಿ ಡಿಸಿಎಂ ಸವದಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪ್ಯಾಕೇಜ್ ಹೆಸರಿನಲ್ಲಿ 3-4 ಲಕ್ಷ ರೂ.ಗಿಂತ ಹೆಚ್ಚು ಶುಲ್ಕವನ್ನು ಪಡೆಯುತ್ತಿರುವುದು ಸರಿಯಲ್ಲ.
ಈ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯಾಧಿಕಾರಿಗಳು ಅನಿರೀಕ್ಷಿತವಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ಪರಿಶೀಲಿಸಬೇಕು ಮತ್ತು ಅಂಥ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಎಲ್ಲಾ ತಾಲೂಕುಗಳಲ್ಲಿರುವ ತರಕಾರಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನಸಂದಣಿಯಿಂದಾಗಿ ಕೋವಿಡ್ ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವುದಕ್ಕೆ ಕಾರಣವಾಗುತ್ತದೆ.
ಆದ್ದರಿಂದ ತರಕಾರಿ ಮಾರುಕಟ್ಟೆಯನ್ನು ಪಟ್ಟಣದ ಹೊರ ವಲಯದ ಯಾವುದಾದರೂ ಮೈದಾನಕ್ಕೆ ಅಥವಾ ವಿಶಾಲ ಬಯಲು ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ನಿರ್ದೇಶನ ನೀಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ 3 ಹಂತಗಳಲ್ಲಿ ಕೋವಿಡ್ ಪ್ರಕರಣಗಳನ್ನು ಪರಿಗಣಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ಮೊದಲನೆಯದಾಗಿ ಸಾಧಾರಣ ರೋಗ ಲಕ್ಷಣ ಇರುವಂಥವರನ್ನು ಹೋಂ ಕ್ವಾರೆಂಟೈನ್‍ಗೆ ಕಳುಹಿಸಿ ಅವರ ಮೇಲೆ ನಿಗಾವಹಿಸಬೇಕು.