ಬೆಂಗಳೂರು: ಪ್ರಿಯಾಂಕಾ ಗಾಂಧಿ ಕೇವಲ 4 ಜನರ ಜತೆ ತೆರಳಿದಾಗ ಎಳೆದಾಡಿ ಬಂಧಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ರೈತರ ಹತ್ಯೆ ಜಲಿಯನ್ ವಾಲಾಬಾಗ್ ನರಮೇಧಕ್ಕಿಂತ ಹೀನಾಯ ಕೃತ್ಯ. ಬಿಜೆಪಿ ಸರ್ಕಾರ ಬ್ರಿಟೀಷರಿಗಿಂತ ಹೀನಾಯವಾಗಿ ನಡೆದುಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದ ಅನ್ನದಾತನಲ್ಲಿ ಅನಾಥ ಪ್ರಜ್ಞೆ ಕಾಡುವಂತಾಗಿದೆ. ರೈತ ವಿರೋಧಿ ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ ಎಂದು ಆರೋಪಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದನ್ನು ಖಂಡಿಸಿ ಸೋಮವಾರ ಪಂಜಿನ ಮೆರವಣಿಗೆ ನಡೆಸಿತು.
ನಿನ್ನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಬೆಂಗಾವಲು ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿದ್ದನ್ನು ಹಾಗೂ ಹತ್ಯೆಗೊಳಗಾದ ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳಿದ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ಅವರ ಮೇಲೆ ಪೊಲೀಸರ ದೌರ್ಜನ್ಯ, ಕಾನೂನು ಬಾಹಿರ ಬಂಧನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ಪಂಜಿನ ಮೆರವಣಿಗೆ ನಡೆಸಿದರು.
ಪಂಜಿನ ಮೆರವಣಿಗೆ
ಸೋಮವಾರ ಸಂಜೆ 6 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಬಾಳೆಕುಂದ್ರಿ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು, ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ರಾಜ್ಯಪಾಲರನ್ನು ಭೇಟಿ ಮಾಡಿ, ರೈತರ ಹತ್ಯೆ ಮಾಡಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಪಡೆದು, ಅವರನ್ನು ಬಂಧಿಸಬೇಕು.
ಕಾನೂನು ಬಾಹಿರವಾಗಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಿಡುಗಡೆ ಮಾಡಬೇಕು. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗುತ್ತಿರುವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ತಪ್ಪಿಸಬೇಕು. ರೈತರ ಮರಣ ಶಾಸನವಾಗಿರುವ ಕೃಷಿ ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರಜಾಪ್ರಭುತ್ವಕ್ಕೆ ಬಿಜೆಪಿ ಮಾರಕ
ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದೇಶದಲ್ಲಿ ಸ್ವಾತಂತ್ರ್ಯಕ್ಕೆ ದೊಡ್ಡ ಅಪಮಾನವಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹುಟ್ಟಿರುವುದೇ ಹೋರಾಟದಿಂದ. ಹೋರಾಟ ನಮ್ಮ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.