ಬೆಂಗಳೂರು :ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪರಿಷ್ಕರಿಸುವ ಕುರಿತು ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಕುರಿತು ಕಾನೂನು ಸಲಹೆ ಪಡೆದು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ವಾಲ್ಮೀಕಿ ಸಮುದಾಯದ ನಿಯೋಗಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಸಿಎಂ ಭೇಟಿ ಮಾಡಿದ ಸ್ವಾಮೀಜಿ ನೇತೃತ್ವದ ವಾಲ್ಮೀಕಿ ಸಮುದಾಯದ ನಿಯೋಗ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀಗಳ ನೇತೃತ್ವದ ನಿಯೋಗದೊಂದಿಗೆ ಸಿಎಂ ಬಿಎಸ್ವೈ ಸಭೆ ನಡೆಸಿದರು. ವಾಲ್ಮೀಕಿ ಸಮುದಾಯಕ್ಕೆ ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು.
ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿ ಆಲಿಸಿದ ಸಿಎಂ ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಮುಖ್ಯಮಂತ್ರಿಗಳು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಸಮುದಾಯದ ಮುಖಂಡ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ, ವರದಿ ಬಗ್ಗೆ ಕಾನೂನು ಸಲಹೆ ಪಡೆದು ಸಂಪುಟದಲ್ಲಿಟ್ಟು ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ ಎಂದರು.