ಬೆಂಗಳೂರು:ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವ ಅರೆ ನ್ಯಾಯಿಕ ಪ್ರಾಧಿಕಾರಗಳ ವಿಚಾರಣಾ ಕಲಾಪಗಳಿಗೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಹಂತ - ಹಂತವಾಗಿ ಕಲ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಭರವಸೆ ನೀಡಿದೆ.
ಈ ಕುರಿತ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಹಾಗೂ ನ್ಯಾ. ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ. ವಿಚಾರಣೆ ಸರ್ಕಾರದ ಪರ ವಕೀಲರು, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅವರ ಪ್ರಮಾಣಪತ್ರವನ್ನು ಪೀಠಕ್ಕೆ ಸಲ್ಲಿಸಿ ವಿವರಣೆ ನೀಡಿದರು.
ಕಂದಾಯ ಇಲಾಖೆ ಅರೆ ನ್ಯಾಯಿಕ ಪ್ರಾಧಿಕಾರಿಗಳ ವಿಚಾರಣಾ ಕಲಾಪಗಳಿಗೆ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಲಾಗುವುದು.
ಈಗಾಗಲೇ ಇ-ಆಡಳಿತ ಇಲಾಖೆ ಲೈಸನ್ಸ್ ಒದಗಿಸಿದೆ. ಸುಪ್ರೀಂಕೋರ್ಟ್, ಹೈಕೋರ್ಟ್‌ನಲ್ಲಿರುವಂತೆ ಸಾಫ್ಟ್‌ವೇರ್ ಖರೀದಿಸಬೇಕಾಗಿದೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ ಎಂದು ಸರ್ಕಾರಿ ವಕೀಲರು ವಿವರಿಸಿದರು. ಪ್ರಮಾಣ ಪತ್ರ ದಾಖಲಿಸಿಕೊಂಡ ಪೀಠ, ಈ ಕುರಿತು ಕೈಗೊಂಡ ಕ್ರಮಗಳ ಪ್ರಗತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಭೂ ಕಂದಾಯ ಕಾಯ್ದೆ-1964ರ ಅನುಸಾರ ಕಂದಾಯ ಇಲಾಖೆಯ ಹಲವು ಅಧಿಕಾರಿಗಳು ಅರೆ ನ್ಯಾಯಿಕ ಅಧಿಕಾರ ಹೊಂದಿದ್ದಾರೆ. ಕಂದಾಯ ದಾಖಲೆಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸುವ ಅಗತ್ಯವಿದೆ.
ಆದ್ದರಿಂದ, ಕಂದಾಯ ಇಲಾಖೆಯು ಅರೆ ನ್ಯಾಯಿಕ ಪ್ರಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಲು ಕೋರಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಬೇಕು. ಆ ಪ್ರಸ್ತಾವನೆಯನ್ನು ಸರ್ಕಾರ 1 ತಿಂಗಳಲ್ಲಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪೀಠ ಹಿಂದಿನ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.