ಬೆಂಗಳೂರು :ವಿಧಾನಪರಿಷತ್ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಮೊದಲು ಜೆಡಿಎಸ್ ಅಭ್ಯರ್ಥಿಯಾಗಿ ಟಿ ಎ ಶರವಣ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ್, ತಿಪ್ಪೇಸ್ವಾಮಿ, ಶಾಸಕ ಆಶ್ವಿನ್‌ಕುಮಾರ್ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು. ಜೆಡಿಎಸ್ ಅಭ್ಯರ್ಥಿ ಟಿ.ಎ. ಶರವಣ ಅವರು ಎರಡು ಸೆಟ್ ನಾಮಪತ್ರ ಸಲ್ಲಿಸಿದರು.
ಮೊದಲ ನಾಮಪತ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು ಸೂಚಕರಾಗಿದ್ದಾರೆ. ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಾಸಕರಾದ ಬಂಡೆಪ್ಪ ಕಾಶೆಂಪೂರ್, ಎ.ಮಂಜುನಾಥ್ ಸೂಚಕವಾಗಿದ್ದಾರೆ. ವರಿಷ್ಠ ದೇವೇಗೌಡರು ಮುಖಂಡರ ಜೊತೆ ಸಭೆ ನಡೆಸಿ ಅಂತಿಮವಾಗಿ ಶರವಣ ಅವರನ್ನು ಆಯ್ಕೆ ಮಾಡಿದರು.
ಇದಕ್ಕೂ ಮುನ್ನ ವಿಧಾನಸೌಧದ ಜೆಡಿಎಸ್ ಕಚೇರಿಯಲ್ಲಿ ಸಭೆ ಸೇರಿ ಶರವಣ ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಯಿತು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಟಿ.ಎ. ಶರವಣ ಅವರು, ಪಕ್ಷ ನಿಷ್ಠೆಯನ್ನು ಗಮನಿಸಿ ಎರಡನೇ ಬಾರಿ ವಿಧಾನಪರಿಷತ್ನಲ್ಲಿ ಸೇವೆ ಸಲ್ಲಿಸಲು ವರಿಷ್ಠರು ಅವಕಾಶ ಕೊಟ್ಟಿದ್ದಾರೆ. ದೇವೇಗೌಡರಿಗೆ, ಕುಮಾರಸ್ವಾಮಿ ಅವರಿಗೆ ಹಾಗೂ ಪಕ್ಷದ ಶಾಸಕರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.
ಭಾವುಕರಾಗಿ ಮಾತನಾಡಿದ ಶರವಣ, ಸಣ್ಣ ಸಮಾಜದಿಂದ ಬಂದಿದ್ದೇನೆ. ಹಾಗಿದ್ದರೂ ಬೆಳೆಯಲು ಅವಕಾಶ ಕೊಟ್ಟಿದ್ದಾರೆ. ನನ್ನ ಜವಾಬ್ದಾರಿ ಇನ್ನಷ್ಟು ಜಾಸ್ತಿಯಾಗಿದೆ ಎಂದರು. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ 3ನೇ ಬಾರಿಗೆ ಪಟ್ಟಾಭಿಷೇಕ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಜನರು ತಿರಸ್ಕಾರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಜನರು ತೊಂದರೆಗೆ ಒಳಗಾಗುತ್ತಿದ್ದಾರೆ. ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸದೆ ಅಧಿಕಾರಿಗಳ ಮೂಲಕ ಆಡಳಿತ ನಡೆಸಿ ದುರುಪಯೋಗ ಮಾಡುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ. ಜನರು ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ. ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಜೆಡಿಎಸ್ ಸಜ್ಜಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ : ಪ್ರತಿಕ್ರಿಯೆ ನೀಡಲು ಸಿದ್ದರಾಮಯ್ಯ ನಿರಾಕರಣೆ