ಬೆಂಗಳೂರು: ಹೋಮ್ ಕ್ವಾರೆಂಟೈನ್ ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದು, ಸರ್ಕಾರ ಕೋವಿಡ್-19 ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದೆ. ಅದರಂತೆ ಬಹುಮಹಡಿ ವಸತಿ ಸಮುಚ್ಚಯ ಅಥವಾ ಮನೆಯಲ್ಲಿರುವ ಸ್ವತಂತ್ರವಾದ ಮತ್ತು ಸೂಕ್ತ ಪ್ರತ್ಯೇಕ ಕೊಠಡಿ ಲಭ್ಯತೆಯನ್ನು ಅವಲಂಬಿಸಿ ಕೋವಿಡ್ ಪಾಸಿಟಿವ್ ವ್ಯಕ್ತಿಗಳನ್ನು ಮನೆಯಲ್ಲಿ ಪ್ರತ್ಯೇಕ ಗೊಳಿಸುವಿಕೆ (Home Isolation) ಇರಬೇಕು. ಇನ್ನು ವಿವಿಧ ರಾಜ್ಯಗಳಿಂದ ಆಗಮಿಸಿದ ಪ್ರಯಾಣಿಕರಿಗೆ, ಕೋವಿಡ್ ಪಾಸಿಟಿವ್ ಸೋಂಕಿತರು ಮತ್ತು ಪ್ರಥಮ ಸಂಪರ್ಕಿತರು ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ಗೆ ಒಳಪಡಲು ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ವಿವರಿಸಿದ್ದಾರೆ.
ಆದರೆ ಕೋವಿಡ್ ಪಾಸಿಟಿವ್ ವ್ಯಕ್ತಿಗಳು, ಪ್ರಥಮ ಸಂಪರ್ಕಿತರು ಹಾಗೂ ಅಂತರರಾಜ್ಯ ಪ್ರಯಾಣಿಕರು ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದ ದುರ್ಬಲರು ಮತ್ತು ಜನಸಮುದಾಯಕ್ಕೆ ಸೋಂಕು ಹರಡಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಹಿತದೃಷ್ಟಿಯಿಂದ ಪ್ರಯಾಣಿಕರು, ಕೋವಿಡ್-19 ಸೋಂಕಿತರು ಮತ್ತು ಪ್ರಥಮ ಸಂಪರ್ಕಿತರು ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ಗೆ ಒಳಪಡುವುದನ್ನು ಖಾತ್ರಿ ಪಡಿಸಲು ಮತ್ತು ನೀಡಲಾದ ಸೂಚನೆಗಳನ್ನು ಅನುಸರಣೆ ಮಾಡಲು ಅನುವಾಗುವಂತೆ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ನಿಯಮಗನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಒಂದು ವೇಳೆ ನಿಯಮ ಉಲ್ಲಂಘಿಸಿದ ವ್ಯಕ್ತಿಗಳಿಗೆ ಏಕ ಪಕ್ಷೀಯವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005, ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ-1897 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.