ಬೆಂಗಳೂರು: ಚುನಾಯಿತ ಪ್ರತಿನಿಧಿಗಳ ಚಲನವಲನಗಳನ್ನು ಜನ ಗಮನಿಸುತ್ತಿದ್ದು, ಹಿರಿಯರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ ಎಂದು ಸಿಎಂ ಯಡಿಯೂರಪ್ಪ ಗ್ರಾಮ ಪಂಚಾಯತ್‌ಗಳ ಜನ ಪ್ರತಿನಿಧಿಗಳಿಗೆ ಕಿವಿ ಮಾತು ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಸಮಾರಂಭ.. ಗಾಂಧಿ ಜಯಂತಿ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಹಳ್ಳಿಗಳು ಭಾರತದ ಆತ್ಮ ಎಂದು ಗಾಂಧಿ ಬಣ್ಣಿಸಿದ್ದರು. ಭಾರತದ ಭವಿಷ್ಯ ಹಳ್ಳಿಗಳಲ್ಲಿ ಅಡಗಿದೆ. ಗಾಂಧಿ ಕನಸನ್ನು ಸಾಕಾರಗೊಳಿಸುವ ಪ್ರಯತ್ನವನ್ನು ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದರು.
ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಕರ್ನಾಟಕ ಬದ್ಧವಾಗಿದೆ. ಗಾಂಧಿ ಚಿಂತನೆ ಅನುಷ್ಠಾನಕ್ಕೆ ತರುವಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಕೆರೆ ಕಟ್ಟೆ ಪುನರುಜ್ಜೀವನ, ಚೆಕ್ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ಪಂಚಾಯತ್ ರಾಜ್ಯ ವ್ಯವಸ್ಥೆ ಗಣಕೀಕರಣಗೊಳಿಸಲು ಸರ್ಕಾರ ಬದ್ಧ. ಗ್ರಾಮ ಪಂಚಾಯತ್ ಆಸ್ತಿಗಳನ್ನು ಡಿಜಿಟಲೈಸ್ ಮಾಡಲು ನಾವು ಮುಂದಾಗುತ್ತಿದ್ದೇವೆ. ಭ್ರಷ್ಟಾಚಾರ ತೊಡೆದು ಹಾಕಿ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಕರೆ ನೀಡಿದರು.
ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ:
ಇದೇ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಸಚಿವ ಕೆ ಎಸ್ ಈಶ್ವರಪ್ಪ, ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರಿಗೆ ಮಾಹಿತಿ ಕೊರತೆ ಇದೆ. ಹಾಗಾಗಿ ಅವರು ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸ್ತಾರೆ ಅಂತಾ ಟ್ವೀಟ್ ಮಾಡಿದ್ದಾರೆ. ನಮ್ಮ ಸರ್ಕಾರ 511 ಕೋಟಿ ರೂ. ಕೂಲಿ ಬಾಕಿಯಲ್ಲಿ 341 ಕೋಟಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಒಟ್ಟು ಈವರೆಗೆ ಕೇಂದ್ರ ಸರ್ಕಾರದಿಂದ ಕೂಲಿ ಹಾಗೂ ಉಪಕರಣಗಳಿಗೆ 950 ಕೋಟಿ ರೂ. ಕೇಂದ್ರ ಬಿಡುಗಡೆ ಮಾಡಿದೆ ಎಂದು ಸ್ಪಷ್ಟಪಡಿಸಿದರು.
176 ಗ್ರಾಮ ಪಂಚಾಯತ್‌ಗಳಿಗೆ ಪುರಸ್ಕಾರ:
2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ 176 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದ್ದು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಸಿಎಂ ಯಡಿಯೂರಪ್ಪ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ ಮಾಡಿದರು.ಇನ್ನು, ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ, ಎಸ್ ಆರ್ ವಿಶ್ವನಾಥ್, ಯೋಜನಾ ಆಯೋಗದ ಉಪಾಧ್ಯಕ್ಷ ಪುಟ್ಟಸ್ವಾಮಿ, ಕಾರ್ಯದರ್ಶಿ ನಾಗಲಾಂಬಿಕಾ ದೇವಿ ಮತ್ತಿತರರು ಉಪಸ್ಥಿತರಿದ್ದರು.