ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಮಲೆನಾಡು ಭಾಗದಲ್ಲೂ ಮಳೆ ಮುಂದುವರೆದಿದೆ. ಸದ್ಯಕ್ಕೆ ಮಳೆ ಬಿಡುವ ಕೊಡುವ ಸೂಚನೆಗಳು ಕಂಡುಬರುತ್ತಿಲ್ಲ. ಆದರೆ ಮುಂದಿನ ಕೆಲ ದಿನಗಳಲ್ಲಿ ಮಳೆಯ ಆರ್ಭಟ ಇಳಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಭಾಗದಲ್ಲಿ ಟ್ರಪ್ ನಿರ್ಮಾಣವಾಗಿರುವುದರಿಂದ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ನಿಲ್ಲುವ ಸೂಚನೆಗಳಿಲ್ಲ. ಇನ್ನು ಕೆಲ ದಿನ ಹೆಚ್ಚು ಕಡಿಮೆ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.