ಬೆಂಗಳೂರು: ನಗರದ ಪ್ರಮುಖ ಶೇಷಾದ್ರಿ ರಸ್ತೆಯಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಶೇ 70ರಷ್ಟು ಪೂರ್ಣ ಗೊಳಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಗುರಿಯನ್ನು ಬಿಬಿಎಂಪಿ ಹೊಂದಿದೆ.
ಶೇಷಾದ್ರಿ ರಸ್ತೆಯ ಪಕ್ಕದಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಿರಂತರ ಪ್ರತಿಭಟನೆ, ಭಾರಿ ಪ್ರಮಾಣದ ವಾಹನ ಸಂಚಾರದಿಂದ ಕಾಮಗಾರಿ ಸ್ವಲ್ಪಮಟ್ಟಿಗೆ ವಿಳಂಬವಾಗಿದೆ. ಇನ್ನೊಂದು ತಿಂಗಳಿನಲ್ಲಿ ಪೂರ್ಣ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪಾಲಿಕೆ ವಿಶೇಷ ಆಯುಕ್ತ ಕೆ.ವಿ. ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
ಸ್ವಾತಂತ್ರ್ಯ ಉದ್ಯಾನವನದ ಪಕ್ಕದ ಬಹುಮಹಡಿ ಪಾರ್ಕಿಂಗ್ ಕಟ್ಟಡಕ್ಕೆ ಸೋಲಾರ್ ಪ್ಯಾನಲ್‌ವುಳ್ಳ ಮೇಲ್ಚಾವಣಿ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ನಡೆದ ಪ್ರತಿಭಟನೆಗಳು ಹಾಗೂ ಮಳೆಯಿಂದ ಕೆಲಸ ವಿಳಂಬ ಆಗಿದ್ದು, ಜೂನ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.