ದಾವಣಗೆರೆ: ಕಳೆದ ನಾಲ್ಕೈದು ದಿನಗಳಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಹೊನ್ನಾಳಿ ಹಾಗೂ ಹರಿಹರದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ತಲೆದೋರಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಕಾರ್ಯ ಬಿರುಸಿನಿಂದ ಸಾಗಿದೆ.
ತುಂಗಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇರುವುದರಿಂದ ನದಿಪಾತ್ರದ ವಾಸಿಗಳಾದ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ನಿವಾಸಿಗಳ ಮನವೊಲಿಸಿ ಗಂಜಿ ಕೇಂದ್ರಗಳಿಗೆ ಕಳುಹಿಸಿ ಕೊಡಲಾಗುತ್ತಿದೆ. ಆದರೆ, ಮೊದಲು ಕೆಲವರು ಅಲ್ಲಿಗೆ ಹೋಗಲು ನಿರಾಕರಿಸಿದರು. ನಮಗೆ ಅಲ್ಲಿ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡುವುದಿಲ್ಲ ಎಂಬ ವಿಚಾರವನ್ನು ಸ್ಥಳಕ್ಕೆ ಭೇಟಿ ನೀಡಿದ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ತಾಲೂಕು ಆಡಳಿತದ ಗಮನಕ್ಕೆ ತಂದರು. ಈ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಜನರು ಆತಂಕಕ್ಕೊಳಗಾಗುವುದು ಬೇಡ ಎಂಬ ಅಭಯ ಕೊಟ್ಟ ನಂತರ ಗಂಜಿ ಕೇಂದ್ರಕ್ಕೆ ಹೋಗಲು ಸಮ್ಮತಿಸಿದರು.