ಬೆಂಗಳೂರು: ದಾವಣಗೆರೆ ಸರ್ಕಾರಿ ಶಾಲೆಯೊಂದರಲ್ಲಿ ಹೆಚ್ಚುವರಿ 2 ಕೊಠಡಿ ನಿರ್ಮಾಣ ಕಾಮಗಾರಿಯನ್ನು ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿದ ಆರೋಪದ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಹರಿಹರ ತಾಲೂಕಿನ ಡಿಆರ್‌ಎಂ ಶಾಲೆಯಲ್ಲಿ ಕೊಠಡಿ ನಿರ್ಮಾಣಕ್ಕೆ ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿದ್ದಾರೆ ಎಂದು ಆಕ್ಷೇಪಿಸಿ ಸ್ಥಳೀಯ ನಿವಾಸಿ ಮಂಜುನಾಥ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.
ಪ್ರತಿವಾದಿಗಳಾದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದೇಶಕರು, ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ, ದಾವಣಗೆರೆ ಜಿಲ್ಲಾ ಪಂಚಾಯತಿ ಸಿಇಒ, ಡಿಆರ್‌ಎಂ ಶಾಲೆಯ ಉಪ ಪ್ರಾಂಶುಪಾಲರು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಗುತ್ತಿಗೆದಾರ ಬಿ.ಹನುಮಂತಪ್ಪಗೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರ ಆರೋಪವೇನು?
ಡಿಆರ್‌ಎಂ ಶಾಲೆಯಲ್ಲಿ ಹೆಚ್ಚುವರಿಯಾಗಿ 2 ಕೊಠಡಿ ನಿರ್ಮಿಸಲು ದಾವಣಗೆರೆ ಜಿಲ್ಲಾ ಪಂಚಾಯತಿ 2021ರ ಏಪ್ರಿಲ್‌ನಲ್ಲಿ 31 ಲಕ್ಷ ರೂ. ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆಯ ಪ್ರಕಾರ, ಸರ್ಕಾರದಿಂದ ನಡೆಯುವ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆದ ನಂತರವೇ ಗುತ್ತಿಗೆ ನೀಡಬೇಕು.
ಈ ಪ್ರಕರಣದಲ್ಲಿ ಕಾಮಗಾರಿಯ ಮೇಲ್ವಿಚಾರಣೆ ನಡೆಸುವಂತೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಸರ್ಕಾರ ಸೂಚಿಸಿತ್ತು. ಆದರೆ, ಸಮಿತಿಯು ಟೆಂಡರ್ ಕರೆಯದೇ ಸ್ಥಳೀಯ ಗುತ್ತಿಗೆದಾರ ಹನುಮಂತಪ್ಪಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಅಲ್ಲದೇ, ಕಾನೂನು ಬಾಹಿರವಾಗಿ ಗುತ್ತಿಗೆದಾರನಿಗೆ ಅನುಕೂಲ ಮಾಡಿಕೊಡುವ ದುರುದ್ದೇಶದಿಂದ ಸಮಿತಿ ಈ ನಿರ್ಣಯ ಕೈಗೊಂಡಿದೆ. ಆದ್ದರಿಂದ ಹನುಮಂತಪ್ಪಗೆ ಕಾಮಗಾರಿ ಗುತ್ತಿಗೆ ನೀಡಲು ಸಮಿತಿ ಕೈಗೊಂಡ ನಿರ್ಣಯ ರದ್ದುಪಡಿಸಬೇಕು. ಕಾನೂನು ಪ್ರಕಾರ ಹೊಸದಾಗಿ ಟೆಂಡರ್ ಕರೆದು ಕಾಮಗಾರಿಯ ಗುತ್ತಿಗೆ ನೀಡುವಂತೆ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.