ಹುಬ್ಬಳ್ಳಿ: ಸಾವಯವ ಕೃಷಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು ತಮ್ಮ ಹುದ್ದೆಯನ್ನು ತ್ಯಜಿಸಿ ಶುದ್ಧ ಹಾಗೂ ಗುಣಮಟ್ಟದ ತರಕಾರಿಗಳನ್ನು ಸಾವಯವ ಪದ್ಧತಿಯಲ್ಲಿ ಬೆಳೆದು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಹುಬ್ಬಳ್ಳಿಯ ಬಿ.ವಿ.ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಗದುಗಿನ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪ್ರಕಾಶ್ ಹುಬ್ಬಳ್ಳಿ ಅವರು ತಮ್ಮ ಪತ್ನಿ ಕುಸುಮಾ ಹುಬ್ಬಳ್ಳಿ ಅವರೊಂದಿಗೆ ಸಾವಯವ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಾವಯವ ಕೃಷಿಯಲ್ಲಿ ಹೆಚ್ಚು ಆಸಕ್ತಿಯಿದ್ದ ಕಾರಣ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಹುದ್ದೆ ಬಿಟ್ಟು, ದಂಪತಿಗಳಿಬ್ಬರು ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದಲ್ಲಿದ್ದ ಒಟ್ಟು 4 ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಪ್ರಸ್ತುತ ಒಟ್ಟು 55 ವಿವಿಧ ರೀತಿಯ ತರಕಾರಿ ಬೆಳೆ ಬೆಳೆಯುತ್ತಿರುವ ಇವರು, 40 ಬಗೆಯ ದೇಶಿ ತರಕಾರಿ ಹಾಗೂ 15 ವಿದೇಶಿ ತರಕಾರಿಗಳನ್ನು ಬೆಳೆಯುತ್ತಾರೆ. ಜೊತೆಗೆ ಹುಬ್ಬಳ್ಳಿ ನಗರದ ನಿವಾಸಿಗಳಿಂದ ಆನ್‌ಲೈನ್ ಮತ್ತು ವಾಟ್ಸ್ಆಪ್ ಮೂಲಕ ಆರ್ಡರ್ ಪಡೆದುಕೊಂಡು ಗ್ರಾಹಕರ ಮನೆ ಬಾಗಿಲಿಗೆ ತರಕಾರಿ ಸರಬರಾಜು ಮಾಡುವ ಮೂಲಕ ಹೆಸರುಗಳಿಸಿದ್ದಾರೆ.