ಹುಬ್ಬಳ್ಳಿ: ಬಿಜೆಪಿ ಸರ್ಕಾರ ಹುಟ್ಟಿದ್ದೇ ಶಾಸಕರ ಖರೀದಿಯಿಂದ. ಇದೀಗ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ದೆಹಲಿಯಿಂದ ಯಾರೋ ಬಂದು ತಮ್ಮನ್ನು ಭೇಟಿಯಾಗಿದ್ದರು. ₹2,500 ಕೋಟಿ ಕೊಟ್ಟರೆ ಮುಖ್ಯಮಂತ್ರಿ ಮಾಡಲಾಗುವುದು, ಸಿದ್ಧತೆ ಮಾಡಿಕೊಳ್ಳಿ ಎಂದಿದ್ದರು ಅಂತಾ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಇಡೀ ಆಡಳಿತ ವ್ಯವಸ್ಥೆಯನ್ನೇ ಅಣಕಿಸುತ್ತಿದೆ. ಕೂಡಲೇ ಸರ್ಕಾರ ಅವರನ್ನು ಹಾಗೂ ಅವರ ಹಿಂದಿರುವವರನ್ನ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದರು.
ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಬ್ರಹ್ಮಾಂಡ ಭ್ರಷ್ಟಾಚಾರ ನೋಡಿಲ್ಲ. ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ತಯಾರಿ ಮಾಡಿಕೊಳ್ಳಿ ಎಂದು ಯತ್ನಾಳ್ ಹೇಳಿದ್ದಾರೆ. ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಹಾಗಾಗಿ, ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದರೆ, ಅವರ ಪಕ್ಷದ ಗೌರವವನ್ನು ಉಳಿಸಿಕೊಳ್ಳುವ ಉದ್ದೇಶವಿದ್ದರೆ ಕೂಡಲೇ ತನಿಖೆಗೆ ಸೂಚನೆ ನೀಡಲಿ ಎಂದರು.